'ನನ್ನ ಬದುಕಿನಲ್ಲಿ ಎಲ್ಲವೂ ನೀನೆ' ತಾಯಿ ಪವಿತ್ರಾ ಗೌಡಗಾಗಿ ಭಾವನಾತ್ಮಕವಾಗಿ​ ಬರೆದ ಮಗಳು ಖುಷಿ

pavitra gowda
Published on

ಬೆಂಗಳೂರು: ಸ್ಯಾಂಡಲ್​ವುಡ್​​ ನಟ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಾಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ದರ್ಶನ್ ಹಾಗೂ ಪವಿತ್ರಾ​ ಕುಟುಂಬದ ಮೇಲೆ ತೀವ್ರ ಪರಿಣಾಮ ಬೀರಿದೆ. ದರ್ಶನ್​ ಪುತ್ರ ವಿನೀಶ್​​ ಇದೀಗ ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌ ಮಾಡಿದ್ದ ಬೆನ್ನಲ್ಲೇ ಇದೀಗ ಪವಿತ್ರಾ ಗೌಡ ಅವರ ಮಗಳು ಕೂಡಾ ತಾಯಿಗೆ ವಿಶ್​​ ಮಾಡಿ ಪೋಸ್ಟ್​​ ಮಾಡಿದ್ದಾರೆ.

ಇವತ್ತು(ಜೂನ್ 16) ವಿಶ್ವ ತಂದೆಯಂದಿರ ದಿನ ಆಚರಿಸಲಾಗುತ್ತಿದೆ.ಈ ದಿನವನ್ನು ಬಹುತೇಕರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ನೆಚ್ಚಿನ ತಂದೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಳ್ಳುವ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಅದರಂತೆಯೇ ಪವಿತ್ರಾ ಗೌಡ ಮಗಳು ಖುಷಿ ಕೂಡ ಪೋಸ್ಟ್​ ಹಂಚಿಕೊಳ್ಳುವ ಮೂಲಕ ತಾಯಿಗೆ ಭಾವನಾತ್ಮಕ ಸಂದೇಶ ಬರೆದಿದ್ದಾಳೆ.

ಇನ್​​ಸ್ಟಾಗ್ರಾಮ್​​ನಲ್ಲಿ ಸ್ಟೇಟಸ್​ ಹಾಕಿಕೊಂಡ ಖುಷಿ ಗೌಡ, ನನ್ನ ಬದುಕಿನಲ್ಲಿ ಎಲ್ಲವೂ ನೀನೆ ಎಂದು ಬರೆದಿದ್ದಾಳೆ. ತಾಯಿ ಪವಿತ್ರಾ ಗೌಡಗೆ ಟ್ಯಾಗ್​ ಮಾಡಿದ್ದಾಳೆ. ಮಗಳು ಖುಷಿಯ ಹಣೆಗೆ ಪವಿತ್ರಾ ಮುತ್ತಿಡುವ ಫೋಟೋ ಹಂಚಿಕೊಂಡಿದ್ದಾಳೆ.

ಏನಿದು ಪ್ರಕರಣ?: ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ.

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ. ಸದ್ಯ ಮಗಳು ತನ್ನ ತಾಯಿಗಾಗಿ ಕಾಯುತ್ತಿದ್ದಾಳೆ. ಇಂದು ‘ಫಾದರ್ಸ್​ ಡೇ’ ದಿನದಂದು ಖುಷಿ ತಾಯಿಗಾಗಿ ಸ್ಟೇಟಸ್​ ಹಾಕಿಕೊಂಡು ನೆನಪಿಸಿಕೊಂಡಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net