ಸಂತ್ರಸ್ತೆ ಅಪಹರಣ ಪ್ರಕರಣ : ರೇವಣ್ಣ ಜಾಮೀನು ಆದೇಶ ಎತ್ತಿ ಹಿಡಿದ ಹೈಕೋರ್ಟ್

highcourt
Published on

ಬೆಂಗಳೂರು: ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಪಡೆದಿರುವ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತಂತೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಎಚ್.ಡಿ.ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರಿಗೆ ಮೇ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ತದನಂತರ ರೇವಣ್ಣ ಅವರಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್‌ಐಟಿ ಹೈಕೋರ್ಟ್ ಮೆಟ್ಟಿಲೇರಿತ್ತು. ಆ.1ರಂದು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ನ್ಯಾಯಪೀಠ ಬುಧವಾರ ಪ್ರಕಟಿಸಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

6 ಆರೋಪಿಗಳಿಗೂ ಬೇಲ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತೆ ಅಪಹರಣದ ಇತರ ಆರೋಪಿಗಳಾಗಿರುವ ಹಾಸನದ ಸತೀಶ್ ಬಾಬು, ಎಚ್.ಕೆ ಸುಜಯ್, ಎಚ್.ಎನ್. ಮಧು, ಎಸ್.ಟಿ ಕೀರ್ತಿ, ಎಚ್.ಡಿ ಮಾಯು ಗೌಡ, ಕೆ.ಎ ರಾಜಗೋಪಾಲ್ ಅವರ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ಬುಧವಾರ ಪುರಸ್ಕರಿಸಿದೆ. 2ರಿಂದ 7ನೇ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಎ್ಲ ಆರೋಪಿಗಳು ತಲಾ 5 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಇತರ ಷರತ್ತುಗಳನ್ನು ಪಾಲಿಸಬೇಕು ಎಂದು ನ್ಯಾಯಾಲಯವು ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net