

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಟೆಂಡರ್ ಪ್ರಕ್ರಿಯೆ ಸೇರಿ ವಿವಿಧ ಅಕ್ರಮಗಳ ಕುರಿತು ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಸಂಸ್ಥೆಯಲ್ಲಿನ ಕೆಲ ವೈದ್ಯರು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಾಲ್ಕು ಪುಟಗಳ ವರದಿಸಹಿತ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಶೀಘ್ರವೇ ತನಿಖಾ ತಂಡ ರಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಕಿದ್ವಾಯಿ ಸಂಸ್ಥೆಯಲ್ಲಿ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ, ಟೆಂಡರ್‌ಗಳು ಹಾಗೂ ಔಷಧಗಳ ಖರೀದಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಹೀಗಾಗಿ, ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಹಕಾರ ಇಲಾಖೆಯ ಒಬ್ಬ ಅಧಿಕಾರಿ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿ, ಎರಡು ವಾರಗಳ ಒಳಗೆ ಪಾರದರ್ಶಕ ವರದಿಯನ್ನು ಸಲ್ಲಿಸುವಂತೆ ತಾಕೀತು ಮಾಡಿದ್ದಾರೆ.