ಕೊಡಗು ನೆರೆ ಕುರಿತು ಸಿಎಂಗೆ ಕರೆ ಮಾಡಿದ ಪ್ರಧಾನಿಯಿಂದ ಭರವಸೆ

ಮಡಿಕೇರಿ: ಭೀಕರ ಮಳೆಗೆ ಸೃಷ್ಟಿಯಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಕೊಡಗು ಜಿಲ್ಲಾ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಭಾನುವಾರ ಕರೆ ಮಾಡಿ ಮಾತನಾಡಿರುವ ಪ್ರಧಾನಿ, ಕೇಂದ್ರ ಸರ್ಕಾರವು ರಕ್ಷಣೆಗೆ ಹಾಗೂ ಪರಿಹಾರ ಕಾರ್ಯಗಳಿಗೆ ಎಲ್ಲ ರೀತಿಯ ನೆರವು ನೀಡಲಿದೆ ಎಂಬ ಭರವಸೆ ನೀಡಿರುವುದಾಗಿ ಸಿಎಂ ಆಫ್​ ಕರ್ನಾಟಕ ಟ್ವಿಟರ್​ ಖಾತೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿಗಳು, ಕೊಡಗಿನಲ್ಲಿ ಪರಿಹಾರ ಕಾರ್ಯಾಚರಣೆ ಭರದಿಂದ ನಡೆಯುತ್ತಿದ್ದು, ಸೇನಾ ಸಿಬ್ಬಂದಿ, ಎನ್.ಡಿ.ಆರ್.ಎಫ್. ಮತ್ತು ಇತರ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು 3500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರಪತಿಗಳಿಂದಲೂ ಕರೆ
ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಕೊಡಗು ಜಿಲ್ಲೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ. (ದಿಗ್ವಿಜಯ ನ್ಯೂಸ್​)