More

    ಕೆ.ಸಿ.ರೆಡ್ಡಿ ಪುತ್ಥಳಿ ನಿರ್ಮಾಣಕ್ಕೆ ನಿರ್ಧಾರ

    ಕೋಲಾರ: ಸಹಕಾರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ನಮ್ಮ ಜಿಲ್ಲೆಯವರೇ ಆದ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪುತ್ಥಳಿ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಘೋಷಿಸಿದರು.

    ನಗರದ ಜಿಲ್ಲಾ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಶನಿವಾರ 67ನೇ ಆಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ನೀಡಿದ ಅವರು, ಕೆ.ಸಿ.ರೆಡ್ಡಿ ಜಿಲ್ಲೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಿ ಅಧ್ಯಕ್ಷರಾಗಿ ರೈತರಿಗೆ ಅನುಕೂಲ ಮಾಡಿದ್ದಾರೆ. ಅವರ ನೆನಪಿಗಾಗಿ ಪುತ್ಥಳಿ ನಿರ್ಮಿಸಲಾಗುತ್ತಿದ್ದು, ಜಿಲ್ಲೆಯ ಎಲ್ಲ ಸಹಕಾರಿಗಳು ಹಾಗೂ ಸಹಕಾರ ಸಂಸ್ಥೆಗಳು ಸಹಕಾರ ನೀಡಬೇಕೆಂದು ತಿಳಿಸಿದರು.

    ದೇಶಕ್ಕೆ ಮಾದರಿಯಾಗಿರುವ ಜಿಲ್ಲೆಯ ಸಹಕಾರ ಕ್ಷೇತ್ರ ಇನ್ನಷ್ಟು ಪ್ರಗತಿ ಸಾಧಿಸಬೇಕಾಗಿರುವುದರಿಂದ ಯುವಕರು ಮುಂದಾಳತ್ವ ವಹಿಸಬೇಕು. ನಷ್ಟದಿಂದ ಮುಚ್ಚುವ ಹಂತ ತಲುಪಿದ್ದ ಡಿಸಿಸಿ ಬ್ಯಾಂಕ್‌ಗೆ ಬ್ಯಾಲಹಳ್ಳಿ ಗೋವಿಂದಗೌಡ ಸಾರಥ್ಯವಹಿಸಿಕೊಂಡ ಮೇಲೆ ಬ್ಯಾಂಕಿನ ಬಗ್ಗೆ ರೈತರು, ಮಹಿಳೆಯರಲ್ಲಿ ನಂಬಿಕೆ, ವಿಶ್ವಾಸ ಹೆಚ್ಚಾಗುವಂತಾಗಿದೆ ಎಂದು ನುಡಿದರು.

    ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಮಾತನಾಡಿ, ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಇನ್ನಷ್ಟು ಬಲಿಷ್ಟವಾಗಬೇಕಿದೆ. ಹಿರಿಯರ ಮಾರ್ಗದರ್ಶನದಲ್ಲಿ ಡಿಸಿಸಿ ಬ್ಯಾಂಕ್ ಮುನ್ನಡೆಯುತ್ತಿದ್ದು, ಎಲ್ಲ ವರ್ಗದ ಜನರ ಹಿತ ಕಾಪಾಡುವುದು ಡಿಸಿಸಿ ಬ್ಯಾಂಕಿನ ಆದ್ಯತೆಯಾಗಿದೆ ಎಂದರು.

    ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಎಸ್.ವಿ.ಗೋವರ್ದನರೆಡ್ಡಿ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ನಿರ್ದೇಶಕ ನಾಗನಾಳ ಸೋಮಣ್ಣ, ಸಹಕಾರ ಸಂಘಗಳ ಉಪ ನಿರ್ದೇಶಕ ಸಿದ್ಧನಗೌಡ ಎನ್.ನೀಲಪ್ಪನವರ್, ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಮಾತನಾಡಿದರು.

    ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾದ ಉರಿಗಿಲಿ ಎಸ್.ಆರ್.ರುದ್ರಸ್ವಾಮಿ, ಇ.ಗೋಪಾಲಪ್ಪ, ಎನ್.ಶಂಕರನಾರಾಯಣಗೌಡ, ಅರುಣಮ್ಮ, ಡಿ.ಆರ್.ರಾಮಚಂದ್ರೇಗೌಡ, ಪೆಮ್ಮಶೆಟ್ಟಿಹಳ್ಳಿ ಎಸ್.ಸುರೇಶ್, ಪಿ.ಎಂ.ವೆಂಕಟೇಶ್, ಎನ್.ನಾಗರಾಜ್, ಕೆ.ಎಂ.ಮಂಜುನಾಥ್, ಬಿ.ರಮೇಶ್, ಟಿ.ಕೆ.ಬೈರೇಗೌಡ, ವಿ.ಪಾಪಣ್ಣ, ಕೋಲಾರ ಎಪಿಎಂಸಿ ಅಧ್ಯಕ್ಷ ಮಂಜುನಾಥ್ ಇತರರು ಉಪಸ್ಥಿತರಿದ್ದರು.

    ಸಹಕಾರ ಕ್ಷೇತ್ರ ಬಲಿಷ್ಠವಾಗಿದೆ: ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಬಲಿಷ್ಠವಾಗಿದೆ ಎಂಬುದಕ್ಕೆ ಕೋಚಿಮುಲ್ ಹಾಗೂ ಡಿಸಿಸಿ ಬ್ಯಾಂಕ್ ಸಾಧನೆಯೇ ಸಾಕ್ಷಿಯಾಗಿದೆ. ಮುಳುಗಿದ್ದ ಡಿಸಿಸಿ ಬ್ಯಾಂಕ್ ಕಳೆದ 7 ವರ್ಷಗಳಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ 36,000ಕ್ಕೂ ಹೆಚ್ಚು ಸ್ತ್ರೀಶಕ್ತಿ ಸಂಘಗಳಿಗೆ, 1823 ಡೇರಿಗಳಿಗೆ ಹಾಗೂ ರೈತರಿಗೆ ಬಡ್ಡಿರಹಿತ ಸಾಲ ನೀಡುವ ಮೂಲಕ ರಾಜ್ಯದ ಗಮನ ಸೆಳೆದಿದೆ ಎಂದು ಕೋಚಿಮುಲ್ ಅಧ್ಯಕ್ಷ,ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
    ಪ್ರತಿದಿನ 10 ಲಕ್ಷ ಲೀಟರ್ ಹಾಲು ಒಕ್ಕೂಟಕ್ಕೆ ಸರಬರಾಜಾಗುತ್ತಿದೆ, ಕೋಲಾರದಲ್ಲೂ 200 ಕೋಟಿ ರೂ. ವೆಚ್ಚದಲ್ಲಿ ಎಂ.ವಿ.ಕೃಷ್ಣಪ್ಪ ಮೇಗಾ ಡೇರಿ ಸ್ಥಾಪನೆಗೆ ನಿರ್ಧರಿಸಲಾಗಿದ್ದು, ಶೀಘ್ರವೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

    ಸಹಕಾರ ಸಂಸ್ಥೆಗಳ ಸದಸ್ಯತ್ವ ಹೆಚ್ಚಿಸುವ ಮೂಲಕ ಪರಿಶಿಷ್ಟ ಜಾತಿ, ಪ.ಪಂಗಡ ಹಾಗೂ ಅಲ್ಪಸಂಖ್ಯಾತರು ಆಡಳಿತ ಮಂಡಳಿಯಲ್ಲಿ ಅವಕಾಶ ಮಾಡಿಕೊಡುವ ಸಂಬಂಧ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮತ್ತು ನಾನು ಚರ್ಚೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
    ಎಂ.ಎಲ್.ಅನಿಲ್ ಕುಮಾರ್, ನಿರ್ದೇಶಕರು, ಡಿಸಿಸಿ ಬ್ಯಾಂಕ್, ಕೋಲಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts