ನಾಳೆ ಕೇಂದ್ರದ ಸಾಧನೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ

ಕೊಲ್ಹಾರ: ಲೋಕಸಭಾ ಚುನಾವಣೆ ಪೂರ್ವಭಾವಿಯಾಗಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಹಾಗೂ ಇನ್ನುಳಿದ ಮುಖಂಡರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸಂಗರಾಜ ದೇಸಾಯಿ ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಿದಂತೆ ರಾಜ್ಯಾದ್ಯಂತ ಎರಡು ತಂಡಗಳ ನೇತೃತ್ವದಲ್ಲಿ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಜ.22 ರಂದು ಬೆಳಗ್ಗೆ 10 ಗಂಟೆಗೆ ಬಸವಬಾಗೇವಾಡಿಯ ಯಲ್ಲಾಲಿಂಗ ಮಠದಲ್ಲಿ ಕೆ.ಎಸ್. ಈಶ್ವರಪ್ಪನವರ ನೇತೃತ್ವದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದವರು ಆರೋಪ ಮಾಡುತ್ತಿದ್ದಾರೆ. ಈ ಆರೋಪದಲ್ಲಿ ಹುರುಳಿಲ್ಲ. ನಮ್ಮ ಮೇಲೆ ಆರೋಪ ಮಾಡುವ ಕಾಂಗ್ರೆಸ್ ಎಲ್ಲ ಶಾಸಕರನ್ನು ಕೂಡಿ ಹಾಕಿ ರೆಸಾರ್ಟ್ ರಾಜಕೀಯ ಮಾಡುತ್ತಿದೆ ಎಂದು ಹರಿಹಾಯ್ದರು. ಟಿ.ಟಿ. ಹಗೇದಾಳ ಇದ್ದರು.