More

    ಕೋವಿಡ್ ಮುಂಜಾಗ್ರತಾ ಕ್ರಮ ಕೈಗೊಳ್ಳಿ; ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಡಿಸಿ ಸುಂದರೇಶ್ ಬಾಬು ಸೂಚನೆ

    ಕೊಪ್ಪಳ: ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚನೆ ನೀಡಿದರು.
    ನಗರದ ಜಿಲ್ಲಾಡಳಿತ ಭವನದ ಡಿಸಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೋವಿಡ್-19 ಲಸಿಕೆ ಕಾರ್ಯದ ಪ್ರಗತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿದರು.
    ಸದ್ಯ ಜಿಲ್ಲೆಯಲ್ಲಿರುವ ಕೋವಿಡ್ ಪ್ರಕರಣಗಳ ಅಂಕಿ-ಅಂಶಗಳ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಔಷಧ, ಬೆಡ್, ಆಕ್ಸಿಜನ್, ವೆಂಟಿಲೇಟರ್ ಹಾಗೂ ಕುಡಿವ ನೀರು, ಶೌಚಗೃಹ, ಬೆಡ್, ರೋಗಿಗಳಿಗೆ ನೀಡುವ ಊಟದ ವ್ಯವಸ್ಥೆ ಮಾಡಬೇಕು. ಒಂದು ವೇಳೆ ಕೋವಿಡ್ ಪ್ರಕರಣಗಳು ಹೆಚ್ಚಿದರೆ ಅಚ್ಚುಕಟ್ಟಾಗಿ ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
    ಜಿಲ್ಲಾಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು, ವಿವಿಧ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಸಿಬ್ಬಂದಿ ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಿದರೆ ಜನರಿಗೆ ಉತ್ತಮ ಸೇವೆ ನೀಡಲು ಸಾಧ್ಯ. ಆಂಬುಲೆನ್ಸ್ ಅಗತ್ಯವಿದ್ದಲ್ಲಿ ಸಂಸದರು, ಶಾಸಕರ ಅನುದಾನದಲ್ಲಿ ಖರೀದಿಸಲು ಕ್ರಮಕೈಗೊಳ್ಳಬೇಕು ಎಂದರು.
    ಈಗಾಗಲೇ ಮೊದಲ ಲಸಿಕೆ ಪಡೆದ 12 ರಿಂದ 14 ವರ್ಷದ ಮಕ್ಕಳಿಗೆ ಎರಡನೇ ಡೋಸ್ ನೀಡಬೇಕು. 15 ರಿಂದ 17 ವರ್ಷದ ಮಕ್ಕಳ ವ್ಯಾಕ್ಸಿನೇಷನ್ ಶೇ.100 ಪ್ರಗತಿ ಸಾಧಿಸುವುದು ಕಡ್ಡಾಯವಾಗಿದೆ. ಲಸಿಕೆಗೆ ಅರ್ಹರಿರುವ ಎಲ್ಲ ಮಕ್ಕಳಿಗೆ ವ್ಯಾಕ್ಸಿನ್ ನೀಡುವುದರ ಮೂಲಕ ಹೆಚ್ಚಿನ ಪ್ರಗತಿ ಸಾಧಿಸಬೇಕು. ಲಸಿಕೆ ಪಡೆಯದ ಜನರನ್ನು ಗುರುತಿಸಿ ಕೋವಿಡ್ ವ್ಯಾಕ್ಸಿನ್ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಪಂ ಸಿಇಒ ಫೌಜಿಯಾ ತರನ್ನುಮ್ ಮಾತನಾಡಿದರು. ಡಿಎಚ್‌ಒ ಡಾ.ಅಲಕನಂದಾ ಮಳಗಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಪ್ರಕಾಶ್ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಈಶ್ವರ ಸವಡಿ, ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ.ನಂದಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts