More

    ಸಕಾಲ ಅರ್ಜಿ ಸ್ವೀಕಾರ ಕಡ್ಡಾಯ: ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚನೆ

    ಕೊಪ್ಪಳ: ವಿವಿಧ ಸರ್ಕಾರಿ ಸೇವೆ ಪಡೆಯಲು ಸಕಾಲ ಯೋಜನೆಯಡಿ ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಕಾಲ ಹಾಗೂ ಐಪಿಜಿಆರ್‌ಎಸ್ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಲಾಖೆಗಳಲ್ಲಿ ಸಕಾಲ ನಿರ್ವಹಣೆಗಾಗಿಯೇ ಒಬ್ಬ ಅಧೀನ ಅಧಿಕಾರಿ ಅಥವಾ ಸಿಬ್ಬಂದಿ ನಿಯೋಜಿಸಬೇಕು. ಕಂದಾಯ, ಜಿಪಂನಡಿ ಬರುವ ಎಲ್ಲ ಇಲಾಖೆಗಳು ಕಡ್ಡಾಯವಾಗಿ ಅರ್ಜಿ ಸ್ವೀಕರಿಸಬೇಕು. ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು. ಯಾವುದೇ ಸೂಕ್ತ ಕಾರಣಗಳಿಲ್ಲದೆ ಅರ್ಜಿ ತಿರಸ್ಕಾರ ಮಾಡುವಂತಿಲ್ಲ. ಸಕಾಲದಲ್ಲಿ ಕೇವಲ ಅರ್ಜಿ ವಿಲೇವಾರಿ ಅಷ್ಟೇ ಅಲ್ಲ, ಬಾಕಿ ಉಳಿದ, ತಿರಸ್ಕರಿಸಿದ ಅರ್ಜಿಗಳ ಸಂಖ್ಯೆಯನ್ನು ಪರಿಗಣಿಸಲಾಗುತ್ತದೆ. ಜಿಲ್ಲೆಯ ಸೂಚ್ಯಂಕದಲ್ಲಿ ಇದು ಋಣಾತ್ಮಕ ಅಂಶ ತೋರಿಸುತ್ತದೆ. ಆದ್ದರಿಂದ ಆದಷ್ಟು ವಿಲೇವಾರಿಗೆ ಕ್ರಮ ಕೈಗೊಳ್ಳಿ ಎಂದರು.

    ಸಕಾಲದಂತೆಯೇ ಸಾರ್ವಜನಿಕರ ಅರ್ಜಿ ಸ್ವೀಕಾರಕ್ಕಾಗಿ ಐಪಿಜಿಆರ್‌ಎಸ್ ತಂತ್ರಾಂಶವನ್ನು ಸರ್ಕಾರ ಜಾರಿಗೊಳಿಸಿದೆ. ಇದು ನೇರವಾಗಿ ಮುಖ್ಯಮಂತ್ರಿಗಳ ಡ್ಯಾಶ್‌ಬೋರ್ಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಸ್ವೀಕೃತವಾಗುವ ಅರ್ಜಿಗಳ ವಿಲೇವಾರಿ ಕುರಿತ ಮಾಹಿತಿ ಮುಖ್ಯಮಂತ್ರಿಗಳ ಗಮನಕ್ಕೆ ಬರುತ್ತದೆ. ಆದ್ದರಿಂದ ಇದರಲ್ಲಿ ಸ್ವೀಕೃತವಾಗುವ ಎಲ್ಲ ಅರ್ಜಿಗಳಿಗೆ ಸೂಕ್ತ ಹಿಂಬರಹದೊಂದಿಗೆ ಅರ್ಜಿಯನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಬೇಕು. ಸಕಾಲದಂತೆ ಇಲ್ಲಿಯೂ ಕಾಲಮಿತಿಯೊಳಗೆ ಕಾರ್ಯನಿರ್ವಹಿಸಬೇಕಿದೆ. ಹೀಗಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

    ಜಿಪಂ ಸಿಇಒ ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ, ಜಿಪಂ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ, ಸಕಾಲ ಕನ್ಸಲ್ಟೆಂಟ್ ವಿಶ್ವನಾಥ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts