

ಬೆಂಗಳೂರು: ಕೇಂದ್ರ ಸರ್ಕಾರ ಲಾಕ್ಡೌನ್ ನಾಲ್ಕನೇ ಹಂತದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ನಾಳೆ (ಮೇ 17) ಬೆಳಗ್ಗೆ 11ಗಂಟೆಗೆ ಸಚಿವರ ಸಭೆ ಕರೆದಿದ್ದಾರೆ. ನಾಳೆ ಸಾರಿಗೆ ಮತ್ತು ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ.
ಕೇಂದ್ರ ಸರ್ಕಾರ ಬಸ್, ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಸಂಚರಿಸಲು ಅವಕಾಶ ಕೊಡಬೇಕೋ ಬೇಡವೋ ಎಂಬುದನ್ನು ನಿರ್ಧರಿಸುವ ಹೊಣೆಯನ್ನು ರಾಜ್ಯ ಸರ್ಕಾರಗಳಿಗೇ ಬಿಟ್ಟಿದೆ. ಈ ಬಗ್ಗೆ ನಾಳಿನ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ.
ಇನ್ನು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರೂ ಕೂಡ ರಾಜ್ಯದಲ್ಲಿ ಸಾರಿಗೆ ಬಸ್ಗಳ ಸಂಚಾರ ಮರು ಆರಂಭದ ಬಗ್ಗೆ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.