More

    ಕುಡಚಿ ಪಟ್ಟಣದಲ್ಲಿ ಕಟ್ಟೆಚ್ಚರ

    ಬೆಳಗಾವಿ: ಕರೊನಾ ವೈರಸ್ ಸೋಂಕಿತರ ನಾಲ್ಕು ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಸುತ್ತಮುತ್ತಲಿನ ಪ್ರದೇಶದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿತ ಪ್ರದೇಶ ಎಂದು ಘೋಷಿಸಿದ್ದಾರೆ. ಅಲ್ಲದೆ ಸೋಂಕಿತರ ಸಂಪರ್ಕದಲ್ಲಿರುವವರ ಆರೋಗ್ಯ ತಪಾಸಣೆಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

    ಪಟ್ಟಣದ ನಿವಾಸಿಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ನಿಷೇಧಿತ ಪ್ರದೇಶದ ಹೊರಗಿನ 2 ಕಿ.ಮೀ. ವ್ಯಾಪ್ತಿಯನ್ನು ( ಬಪರ್ ರೆನ್)ಎಂದು ಘೋಷಿಸಲಾಗಿದೆ. ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ ಕಾಲ್ನಡಿಗೆ, ಇನ್ಯಾವುದೋ ವಾಹನಗಳ ಮೂಲಕ ಒಳ ಪ್ರವೇಶಿಸುವುದು ಹಾಗೂ ನಿರ್ಗಮಿಸುವುದನ್ನು ನಿರ್ಬಂಧಿಸಲಾಗಿದೆ. ಎಲ್ಲ ನಿವಾಸಿಗಳು ಮುಂದಿನ ಆದೇಶವಾಗುವರೆಗೆ ತಮ್ಮ ಮನೆಯಲ್ಲಿಯೇ ಇದ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಸಲಹೆ ಪಾಲಿಸಬೇಕು ಎಂದು ತಿಳಿಸಿದ್ದಾರೆ.

    ನಿಷೇಧಿತ ಪ್ರದೇಶಗಳ 3 ಕಿ.ಮೀ. ವ್ಯಾಪ್ತಿಯಲ್ಲಿ ಐದಕ್ಕೂ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ, ಧಾರ್ಮಿಕ ಉತ್ಸವ, ಉರುಸು, ಮದುವೆ, ಕ್ರೀಡೆ, ಸಂತೆ, ಜಾತ್ರೆ, ಸಮ್ಮೇಳನ,ನಾಟಕೋತ್ಸವ, ವಿಚಾರ ಗೋಷ್ಠಿ ಆಯೋಜಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿನ ಎಲ್ಲ ಕಚೇರಿಗಳು (ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ), ಅಂಗಡಿ, ಮಳಿಗೆ, ದಾಸ್ತಾನು ಕೇಂದ್ರಗಳನ್ನು (ದಿನಸಿ, ಹಾಲು, ಹಣ್ಣು, ತರಕಾರಿ ಮತ್ತು ಔಷಧಿ ಅಂಗಡಿಗಳು ಹೊರತುಪಡಿಸಿ) ಮುಚ್ಚುವುದು. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಹಣ್ಣು ಮತ್ತು ತರಕಾರಿಗಳನ್ನು ಪ್ರತಿದಿನ ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ಮಾತ್ರ ಖರೀದಿಸಲು ಅವಕಾಶವಿರುತ್ತದೆ. ಕುಡಚಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ನೋಡಲ್ ಅಧಿಕಾರಿ ಹಾಗೂ ರಾಯಬಾಗ ತಹಸೀಲ್ದಾರ್‌ಅವರನ್ನು ಮೇಲ್ವಿಚಾರಣಾಧಿಕಾರಿನ್ನಾಗಿ ನೇಮಕ ಮಾಡಲಾಗಿದೆ. ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಐಪಿಸಿ ಕಲಂ 188 ಪ್ರಕಾರ ಕ್ರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.

    ಸೋಂಕಿತರ ಸಂಪರ್ಕದಲ್ಲಿದ್ದವರ ಆರೋಗ್ಯ ತಪಾಸಣೆ ಕಡ್ಡಾಯ

    ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಮೂವರು ಮಹಿಳೆಯರು, ಓರ್ವ ಪುರುಷನಿಗೆ ಕರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕದಲ್ಲಿರುವವರೆಲ್ಲರೂ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. 14 ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್‌ನಲ್ಲಿರಬೇಕು. ಜತೆಗೆ ಸುತ್ತಮುತ್ತಲಿನ ಪ್ರದೇಶದ ಜನರ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts