ಕುಶಾಲನಗರದಲ್ಲಿ ಆಲಿಕಲ್ಲು ಸಹಿತ ಮಳೆ

ಕುಶಾಲನಗರ: ಪಟ್ಟಣದಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರದ ಕೊಂಬೆಗಳು ಮುರಿದು ಬಿದ್ದು ಕೆಲಕಾಲ ಸಂಚಾರಕ್ಕೆ ಅಡಚಣೆಯಾಗಿತ್ತು.

ಮಧ್ಯಾಹ್ನ ಸುಮಾರು 2 ಗಂಟೆಗೆ ಆಲಿಕಲ್ಲು ಸಹಿತ ಮಳೆಯಾಗಿದೆ. ಪರಿಣಾಮವಾಗಿ ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇದ್ದ ಮರದ ಕೊಂಬೆಗಳು ಮುರಿದು ಬಿದ್ದಿವೆ. ಇದರಿಂದ ಸಂಚಾರ ಬಂದ್ ಆಗಿತ್ತು. ಸಾರ್ವಜನಿಕರು ರಸ್ತೆಯಲ್ಲಿ ಬಿದ್ದ ಮರದ ಕೊಂಬೆಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮನೆಗೆ ನುಗ್ಗಿದ ನೀರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ಬುಧವಾರ ಸುರಿದ ಮಳೆಗೆ ಕೊಳಚೆ ನೀರು ಮನೆಗೆ ನುಗ್ಗಿದೆ.

ರಾಷ್ಟ್ರೀಯ ಹೆದ್ದಾರಿ ಸಮೀಪ ಕಳೆದ ಕೆಲವು ತಿಂಗಳ ಹಿಂದೆ ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಕಾಮಗಾರಿ ಇದುವರೆಗೂ ಪೂರ್ಣಗೊಂಡಿಲ್ಲ. ಆದರೆ, ಬುಧವಾರ ಸುರಿದ ಮಳೆ ನೀರು ಸೇರಿ ಚರಂಡಿ ನೀರು ಮನೆ ಹಾಗೂ ವರ್ಕ್ ಶಾಪ್ ಒಳಗೆ ನುಗ್ಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯ ನಿವಾಸಿ ಶ್ರೀನಿಧಿ, ಪಟ್ಟಣದೊಳಗೆ ನಡೆಯುವ ಕಾಮಗಾರಿಗಳು ಮತ್ತು ಸಮಸ್ಯೆಗಳಿಗೆ ಪಂಚಾಯಿತಿಯೇ ಹೊಣೆ. ಈ ಬಗ್ಗೆ ಮುಖ್ಯಾಧಿಕಾರಿಗಳು ಮತ್ತು ಸ್ಥಳೀಯ ಪಂಚಾಯಿತಿ ಸದಸ್ಯರು ನಿವಾಸಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕು. ಆದರೆ, ಯಾರೊಬ್ಬರೂ ನಮ್ಮ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಹೆದ್ದಾರಿ ಅಂಚಿನಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ, ಚರಂಡಿಯ ನೀರು ನೇರ ನದಿಗೆ ಹೋಗದಂತೆ ಇಂಗುಗುಂಡಿಯನ್ನು ನಿರ್ಮಿಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ದೊರಕುತ್ತದೆ ಎಂದು ಸಾರ್ವಜನಿಕರು ಹೇಳುತ್ತಾರೆ.

Leave a Reply

Your email address will not be published. Required fields are marked *