ಸರ್ಕಾರಿ ಶಾಲೆಗಳು ಉಳಿದರೆ ಕನ್ನಡ ಭಾಷೆ ಉಳಿವು

ಕುಶಾಲನಗರ:  ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಕನ್ನಡ ಭಾಷೆ ಉಳಿವು ಸಾಧ್ಯ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪೆರಿಗ್ರಿನ್ ಎಸ್.ಮಚ್ಚಾಡೋ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಕನ್ನಿಕಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಕೊಡಗು ಜಿಲ್ಲಾ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆ, ಶೈಕ್ಷಣಿಕ ವಿಚಾರಗೋಷ್ಠಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಹೆಚ್ಚಿನ ಕಾಳಜಿ ವಹಿಸಬೇಕು. ಶಾಲೆಗಳ ಉಳಿವಿನ ಬಗ್ಗೆ ಪಾಲಕರು, ಶಿಕ್ಷಕರು ಚಿಂತಿಸಬೇಕಿದೆ ಎಂದರು. ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಬೆಟ್ಟನಾಯಕ ಉದ್ಘಾಟಿಸಿದರು.

ಕೂಡಿಗೆ ಡಯಟ್ ಉಪ ನಿರ್ದೇಶಕ ವಾಲ್ಟರ್ ಹಿಲೇರಿ ಡಿ ಮೆಲ್ಲೋ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಎಸ್.ಚೇತನ್ ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಎಚ್.ಕೆ.ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಶಿಕ್ಷಕರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಶಿಕ್ಷಣಾಧಿಕಾರಿ ಎಚ್.ಕೆ.ಪಾಂಡು, ಪ.ಜಾತಿ,ಪಂಗಡ ಪ್ರಾಥಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಸಿ.ರಾಜು ಮತ್ತಿತರರಿದ್ದರು.