More

    ಕಚೇರಿಯಿಂದ ಹೊರಬಂದು ಜನರ ಸಮಸ್ಯೆ ಆಲಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ಪಾಂಡೆ ಸೂಚನೆ

    ಕುಷ್ಟಗಿ: ಕಚೇರಿಯಿಂದ ಹೊರಬಂದು ಸಾರ್ವಜನಿಕರ ಸಮಸ್ಯೆ ಆಲಿಸಿ ಪರಿಹರಿಸುವ ಕಾರ್ಯ ಮಾಡಬೇಕು ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು.

    ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.ದಾಖಲೆ ನಿರ್ವಹಣೆ ಹಾಗೂ ಅರ್ಜಿ ಸ್ವೀಕರಿಸುವ ಸಂದರ್ಭ ಹೊರತುಪಡಿಸಿ ಬೆಳಗ್ಗೆ ಹಾಗೂ ಸಂಜೆ ಹೊತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಲೋಪ ಕಂಡುಬಂದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅನುದಾನ ದುರ್ಬಳಕೆ ಸಾಬೀತಾದಲ್ಲಿ ಎಫ್‌ಐಆರ್ ದಾಖಲಿಸಲೂ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.

    ಸಾರ್ವತ್ರಿಕ ಚುನಾವಣೆ ಸಮೀಪಿಸಿರುವುದರಿಂದ ಗ್ರಾಪಂ ವ್ಯಾಪ್ತಿಯ ಎಲ್ಲ ಬೂತ್‌ಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು. ನರೇಗಾ ಯೋಜನೆಯಡಿ ಇನ್ನಷ್ಟು ವಿನೂತನ ಕಾಮಗಾರಿ ಆಯ್ಕೆ ಮಾಡಿಕೊಂಡು ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದ ಅವರು, ವಸತಿ ಯೋಜನೆ, ಸ್ವಚ್ಛ ಭಾರತ ಮಿಷನ್, ಸಂಜೀವಿನಿ ಇತರ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ತಾಪಂ ಇಒ ಶಿವಪ್ಪ ಸುಬೇದಾರ್, ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಬಸನಗೌಡ, ಎಇಇ ವಿಲಾಸ್ ಭೋಸ್ಲೆ, ನರೇಗಾ ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ ಇತರರಿದ್ದರು.

    ಮದ್ಯ ಅಕ್ರಮ ಮಾರಾಟ ತಡೆಯಿರಿ
    ಕುಷ್ಟಗಿ ಪಟ್ಟಣದ ಪರಿಶಿಷ್ಟ ಜಾತಿ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್, ಊಟ, ವಸತಿ, ಮೂಲ ಸೌಕರ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಕಂದಕೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪರಿಶೀಲಿಸಿದರು. ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ಯುವಕರೂ ಮದ್ಯ ಸೇವಿಸಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮದ್ಯ ಅಕ್ರಮ ಮಾರಾಟಕ್ಕೆ ನಿರ್ಬಂಧ ಹೇರುವಂತೆ ಗ್ರಾಮದ ಮಹಿಳೆಯರು ಸಿಇಒಗೆ ಒತ್ತಾಯಿಸಿದರು. ಮೂರು ದಿನಗಳೊಳಗೆ ಕ್ರಮ ಕೈಗೊಳ್ಳುವುದಾಗಿ ಸಿಇಒ ರಾಹುಲ್ ರತ್ನಂ ಪಾಂಡೆ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts