ಬೆಳಗಾವಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜೆಡಿಎಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಎಪಿಎಂಸಿ ತಿದ್ದುಪಡಿ ಕಾಯ್ದೆ, ಕೈಗಾರಿಕೆ ವ್ಯಾಜ್ಯ ಕಾಯ್ದೆ, ಗುತ್ತಿಗೆ ಕಾರ್ಮಿಕರ ನಿಯಂತ್ರಣ ಮತ್ತು ನಿರ್ಮೂಲನೆ ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವುದನ್ನು ಸರ್ಕಾರ ಕೈಬಿಡಬೇಕು. ಕರ್ನಾಟಕ ಭೂ ಸುಧಾರಣೆ ಕಾಯ್ದೆಯಲ್ಲಿ ರೈತರ ಭೂಮಿ ವಶಪಡಿಸಿಕೊಂಡು 7 ವರ್ಷಗಳ ನಂತರ ಪರಭಾರೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.
ಇದರಿಂದ ಉಳ್ಳವರೇ ಭೂಮಿಯ ಒಡೆಯರಾಗಿ, ಕೃಷಿಕರು ಕಷ್ಟಕ್ಕೆ ಸಿಲುಕುವಂತಾಗುತ್ತದೆ. ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತರ ಹಿತಕ್ಕೆ ಮಾರಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಭೀಮಪ್ಪ ಗಡಾದ, ಅಶೋಕ ಪೂಜಾರಿ, ಸುಭಾಷ ಪೂಜಾರಿ, ಪ್ರಮೋದ ಪಾಟೀಲ, ಚನ್ನಪ್ಪ ವಗ್ಗನವರ, ಇಬ್ರಾಹಿಂ ಕಿತ್ತೂರು, ಈರಣ್ಣ ಕಮ್ಮಾರ, ಮಲ್ಲು ಅರಬಾವಿ ಇತರರು ಇದ್ದರು.