More

  ಕುಡಿಯುವ ನೀರಿನ ಸಮಸ್ಯೆ ಆಗದಿರಲಿ

  ಮಡಿಕೇರಿ:

  ಈ ಬಾರಿ ಬರ ಇರುವ ಕಾರಣ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

  ಜಿಲ್ಲೆಯ 5 ತಾಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವು ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ದೀಪದ ಕೆಳಗೆ ಕತ್ತಲು ಎನ್ನುವಂತಾಗಬಾರದು. ಜಿಲ್ಲೆಯ ಎಲ್ಲಾ ಕುಟುಂಬಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಬೇಕು. ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ದೂರುಗಳು ಕೇಳಿ ಬರುತ್ತಿದ್ದು, ಪ್ರತಿ ಕುಟುಂಬಕ್ಕೂ ಜಲ ಮೂಲವನ್ನು ಬಳಸಿಕೊಂಡು ನಲ್ಲಿ ನೀರು ಸಂಪರ್ಕ ಒದಗಿಸಬೇಕು. ಗಾಳಿಬೀಡು ಬಳಿ ಇರುವ ನವೋದಯ ಶಾಲೆಗೂ ಸಹ ಕುಡಿಯುವ ನೀರು ಸಂಪರ್ಕ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

  ಕೇಂದ್ರ ಪುರಸ್ಕೃತ 42 ಯೋಜನೆಗಳಿದ್ದು, ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಾರ್ವಜನಿಕರಿಗೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಇರಬೇಕು. ಪ್ರಧಾನಮಂತ್ರಿ ಗ್ರಾಮ ಸಡಕ್ ರಸ್ತೆಗಳು ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ರಸ್ತೆಗಳು, ಚರಂಡಿ, ಸ್ವಚ್ಛ ಭಾರತ ಅಭಿಯಾನ, ಬ್ಯಾಂಕ್‌ಗಳ ಹಲವು ಕಾರ್ಯಕ್ರಮಗಳು, ಉಜ್ವಲ ಯೋಜನೆ, ಜಲಜೀವನ್ ಮಿಷನ್ ಯೋಜನೆ ಹೀಗೆ ಹಲವು ಯೋಜನೆಗಳನ್ನು ತಲುಪಿಸಬೇಕು. ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

  ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಸುಮಾರು 9,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 838 ಲಕ್ಷ ರೂ. ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಾಫಿ ಮಂಡಳಿ ಉಪ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮುತ್ತಪ್ಪ ಬೆಳೆ ಹಾನಿ ಬಗ್ಗೆ ಹಲವು ಮಾಹಿತಿ ನೀಡಿದರು.

  ತೋಟಗಾರಿಕೆಯಿಂದ ನೀಡಲಾಗುವ ಸಸಿಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಬೇಕು. ಪಾರದರ್ಶಕವಾಗಿ ಸಸಿಗಳನ್ನು ವಿತರಿಸಬೇಕು. ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವುದು, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಎಲ್ಲೆಡೆ ದೊರೆಯುವಂತಾಗಬೇಕು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸರ್ಕಾರ ಈಗಾಗಲೇ 135 ಕೋಟಿ ರೂ. ಬಿಡುಗಡೆ ಮಾಡಿದೆ. ಬಾಕಿ ಇರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕ್ರಿಟಿಕಲ್ ಕೇರ್ ಸೆಂಟರ್ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಬೇಕು. ಕೊಡಗು ಜಿಲ್ಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆಯುವಂತಾಗಬೇಕು. ಜಿಲ್ಲೆಯ ಹಾಡಿಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಜೊತೆಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು ಎಂದೂ ಹೇಳಿದರು.

  ಎಸ್.ಪಿ. ಕೆ. ರಾಮರಾಜನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕÀ ಡಾ. ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್. ಹೊನ್ನೇಗೌಡ, ಬಿಸಿಎಂ ಇಲಾಖಾ ಅಧಿಕಾರಿ ಕವಿತಾ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಆಹಾರ ಇಲಾಖೆ ಜಂಟಿ ನಿರ್ದೇಶಕಿ ಕುಮುದಾ ಶರತ್ ಇತರರು ಸಭೆಯಲ್ಲಿ ಹಲವು ಮಾಹಿತಿ ನೀಡಿದರು.

  ಬರ ನಿರ್ವಹಣೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 35 ಕೋಟಿ ರೂ. ಇದ್ದು, ಇತ್ತೀಚೆಗೆ ಸರ್ಕಾರ 7.50 ಕೋಟಿ ರೂ. ಬಿಡುಗಡೆ ಮಾಡಿದೆ. ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲಾಗುವುದು. ಹಾಗೆಯೇ ಬರ ನಿರ್ವಹಣೆ ಸಂಬAಧಿಸಿದAತೆ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತದೆ.
  ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

  ಕೊಡಗು ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಕಸ ವಿಲೇವಾರಿ ಸಂಬAಧಿಸಿದAತೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ಬಗ್ಗೆ ಪ್ರವಾಸಿಗರಿಗೂ ಸಹ ಅರಿವು ಮೂಡಿಸಬೇಕು. ಜಲ ಜೀವನ್ ಅಭಿಯಾನ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.
  ಎಂ.ಪಿ. ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯ

  ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತಂದಾಗ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು.
  ವರ್ಣಿತ್ ನೇಗಿ, ಜಿ.ಪಂ., ಸಿಇಒ

  ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಕೊಡಗು ಜಿಲ್ಲೆಯ 63 ಕಡೆಗಳಲ್ಲಿ ಬಿಎಸ್‌ಎನ್‌ಎಲ್ ಟವರ್ ನಿರ್ಮಿಸಲು ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಾಗರಹೊಳೆ ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿಯೂ ಸಹ ಟವರ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಹಕರಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ 20 ಟವರ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
  ಪ್ರತಾಪ್ ಸಿಂಹ, ಕೊಡಗು-ಮೈಸೂರು ಸಂಸದ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts