ಸವದತ್ತಿ: ಯಲ್ಲಮ್ಮ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛಗೊಳಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಸೂಚಿಸಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಮಂಗಳವಾರ ಪುರಸಭೆ ಹಾಗೂ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಕೃತಿಕ ಸೌಂದರ್ಯ ಕಾಪಾಡಿಕೊಳ್ಳುವುದು ಎಲ್ಲರ ಕರ್ತವ್ಯ. ಎಲ್ಲರೂ ಸಹಕರಿಸಬೇಕು ಎಂದ ಅವರು ಅ.8ರಿಂದ 10ರ ವರೆಗೆ ತಾಲೂಕಾಸ್ಪತ್ರೆಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಂಡಿದ್ದು, ಜನತೆ ಉಪಯೋಗ ಪಡೆಯಬೇಕು ಎಂದರು.
ತಾಪಂ ಇಒ ಆನಂದ ಬಡಕುಂದ್ರಿ ಮಾತನಾಡಿ, ಎಲ್ಲೆಡೆ ಸ್ವಚ್ಛತೆ ಕಾಪಾಡುವುದು ಆಂದೋಲನದ ಉದ್ದೇಶ ಎಂದರು. ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿಮಠ, ಕಷಿ ಸಹಾಯಕ ನಿರ್ದೇಶಕ ಶಿವಪ್ರಕಾಶ ಪಾಟೀಲ, ಬಸವರಾಜ ಆಯಟ್ಟಿ ಸೇರಿ ಇಲಾಖೆ ಅಧಿಕಾರಿಗಳು ಇದ್ದರು.