More

    ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಸಿಗಲಿ

    ವಿಜಯಪುರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ದೊರೆತಿದ್ದು, ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳ ಮೊರೆಹೋಗದೆ ನೇರವಾಗಿ ಸೇವಾಕೇಂದ್ರಗಳ ಮೂಲಕ ಸೌಲಭ್ಯ ಪಡೆಯಬೇಕೆಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದರು.

    ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಪೂರ್ವ ಸಿದ್ಧತೆ ಸಭೆ ನಡೆಸಿದ ಅವರು, ಅಧಿಕಾರಿಗಳು ಸಹ ಸೇವಾ ಕೇಂದ್ರಗಳಲ್ಲಿ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು.

    ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದ ಫಲಾನುಭವಿಗಳು ಗ್ರಾಮದ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 11 ಕೇಂದ್ರಗಳು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 3 ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಈ ಸೇವಾ ಕೇಂದ್ರಗಳಿಗೆ ಅಗತ್ಯ ಇಂಟರ್‌ನೆಟ್ ಹಾಗೂ ವಿದ್ಯುತ್ ವ್ಯವಸ್ಥೆ, ಡಾಟಾ ಎಂಟ್ರಿ ಆಪರೇಟರ್, ಬ್ಯಾಟರಿ, ವಿದ್ಯುತ್, ಮೂಲಸೌಲಭ್ಯ ಕುರಿತು ಮುಂಚಿತವಾಗಿ ಖಚಿತಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ನೋಂದಣಿಗೆ ಕಾಲಮಿತಿಯಿಲ್ಲ

    ಸಾರ್ವಜನಿಕರು ಸಹ ಯಾವುದೇ ಆಂತಕಕ್ಕೊಳಗಾಗಬಾರದು. ನೋಂದಣಿಗೆ ಯಾವುದೇ ಅಂತಿಮ ದಿನಾಂಕವಿರುವುದಿಲ್ಲ. ಯಾವುದೇ ದಿನಾಂಕದಂದು ಸಹ ನೋಂದಾಯಿಸಿಕೊಳ್ಳಬಹುದಾಗಿದೆ. ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಪ್ರತಿ ಫಲಾನುಭವಿಗೆ ಸಮಯ ನಿಗದಿಪಡಿಸಲಾಗಿರುತ್ತದೆ. ನಿಗದಿತ ಸಮಯದಲ್ಲಿ ಫಲಾನುಭವಿಗಳು ಸೇವಾ ಕೇಂದ್ರಗಳಿಗೆ ಹೋಗಿ ಯಜಮಾನಿ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಪುಸ್ತಕ ಹಾಗೂ ಯಜಮಾನಿ ಗಂಡನ ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಗೃಹ ಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು. ಆಧಾರ್ ನಂಬರ್‌ಗೆ ಜೋಡಣೆಯಾಗಿರುವ ಖಾತೆ ಹೊರತುಪಡಿಸಿ ಬೇರೆ ಖಾತೆಗೆ ಹಣ ವರ್ಗಾವಣೆ ಬಯಸಿದ್ದಲ್ಲಿ ಆ ಬ್ಯಾಂಕಿನ್ ಖಾತೆ ಸಂಖ್ಯೆ ಒದಗಿಸಬೇಕು ಎಂದರು.

    ಸಹಾಯವಾಣಿ

    ನೋಂದಣಿಗೆ ನಿಗದಿ ಮಾಡಿರುವ ಸಮಯ ಹಾಗೂ ದಿನಾಂಕದ ಕುರಿತು 1902ಗೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ ಎಸ್‌ಎಂಎಸ್ ಮಾಡಿ ವ್ಯಾಟ್ಸ್ ಆಪ್ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಲ್ಲಿ ಸೇವಾ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಲ್ಲಿ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7ಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

    60 ಫಲಾನುಭವಿಗಳಿಗೆ ಅವಕಾಶ

    ಸೇವಾ ಕೇಂದ್ರಗಳಲ್ಲಿ ಜನದಟ್ಟಣೆಯಾಗದಂತೆ ನೋಡಿಕೊಳ್ಳಲು ಪ್ರತಿ ದಿನಕ್ಕೆ 60 ಫಲಾನುಭವಿಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗಿನ ಅವಧಿಯಲ್ಲಿ 30 ಹಾಗೂ ಮಧ್ಯಾಹ್ನದ ಅವಧಿಯಲ್ಲಿ 30 ಜನರು ಸೇರಿದಂತೆ 60 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಸೇವಾ ಕೇಂದ್ರಗಳಲ್ಲಿ ಯಾವುದೇ ಗೊಂದಲವಾಗದಂತೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಂದಣಿ ಪ್ರಕ್ರಿಯೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
    ಮೊಬೈಲ್ ಎಸ್‌ಎಂಎಸ್ ಬಂದವರಿಗೆ ದಿನಕ್ಕೆ 60 ಜನರ ಅವಕಾಶವಿದ್ದು, ಮೆಸೇಜ್ ಬಂದವರು ಮಾತ್ರ ಸಂಬಂಧಿಸಿದ ಕೇಂದ್ರಕ್ಕೆ ಅಗತ್ಯ ದಾಖಲೆ ಸಹಿತ ತೆರಳಿ ನೋಂದಣಿ ಮಾಡಿಕೊಳ್ಳಬೇಕು. ಅರ್ಹರಿಗೆ ನೋಂದಣಿಗೆ ಅವಕಾಶವಿದ್ದು ಜನಸಂಧಣಿಯಾಗದಂತೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ ಮಾಡಿದರು.

    ಪ್ರಜಾಪ್ರತಿನಿಧಿಗಳ ನೇಮಕ

    ಫಲಾನುಭವಿಗಳು ಗೃಹ ಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಸೇವಾ ಕೇಂದ್ರಗಳಲ್ಲಿ ಹಾಗೂ ಇದಕ್ಕೆ ಪರ್ಯಾಯವಾಗಿ ಪ್ರಜಾಪ್ರತಿನಿಧಿ (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ನಂತರ ಮನೆಗೆ ತಲುಪಿಸಲಾಗುವುದು. ನೋಂದಣಿ ಮಾಡಿಕೊಂಡ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಮಂಜೂರಾತಿ ಕುರಿತು ಸಂದೇಶ ರವಾನಿಸಲಾಗುತ್ತದೆ. ಸೇವಾ ಕೇಂದ್ರ ಅಥವಾ ಪ್ರಜಾಪ್ರತಿನಿಧಿಯಲ್ಲಿ ಒಂದು ಕಡೆ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.

    ಪ್ರಚಾರ ಕೈಗೊಳ್ಳಿ

    ಗೃಹ ಲಕ್ಷ್ಮಿ ಯೋಜನೆ ನೋಂದಣಿ ಕುರಿತು ಗ್ರಾಮಾಂತರ ಪ್ರದೇಶದ ಹಳ್ಳಿಗಳಲ್ಲಿ ಡಂಗುರ ಸಾರಿ ತಿಳಿವಳಿಕೆ ನೀಡಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕೇಂದ್ರಗಳ ಮೂಲ ಸೌಲಭ್ಯಗಳ ಕುರಿತು ಪರಿಶೀಲಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಯೋಜನೆ ಕುರಿತು ತಿಳಿವಳಿಕೆ ಮೂಡಿಸಬೇಕು. ಗ್ರಾಮ ಮಟ್ಟದ ವ್ಯಾಪ್ತಿಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿಕೊಂಡು ವ್ಯವಸ್ಥಿತವಾಗಿ ಕೇಂದ್ರಗಳು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.
    ಜಿಪಂ ಸಿಇಒ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಸೌದಾಗರ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪಾ, ಇಂಡಿ ಉಪವಿಭಾಗಾಧಿಕಾರಿ ಆಬಿದ್ ಗದ್ಯಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts