More

  ಡೆಂಘೆ ವಾರಿಯರ್ಸ್​ರಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಲಿ

  ಹುಬ್ಬಳ್ಳಿ : ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರೆ, ಅವರು ತಮ್ಮ ತಂದೆ, ತಾಯಿಗೆ ತಿಳಿವಳಿಕೆ ನೀಡುತ್ತಾರೆ. ಡೆಂಘೆ ಒಂದು ಮಾರಕ ರೋಗವಾಗಿದೆ. ಕೋವಿಡ್ ವಾರಿಯರ್ಸ್​ನಂತೆ ಡೆಂಘೆ ವಾರಿಯರ್ಸ್​ಗಳಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

  ಮೂರುಸಾವಿರ ಮಠದ ಪ್ರೌಢಶಾಲಾ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಡೆಂಘೆ ಜ್ವರ ಮುಂಜಾಗ್ರತೆಯ ಕುರಿತು ಶಾಲಾ, ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

  ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಡೆಂಘೆ ಕುರಿತು ಜಾಗೃತಿ ಮೂಡಿಸಿದರೆ, ತಮ್ಮ ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ, ನಾಲಾ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದೆ. ಘನ ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಎಲ್ಲರೂ ತಂಡವಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಡೆಂಘೆ ರೋಗವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಅಸಾಧ್ಯವಾದದ್ದು ಯಾವುದು ಇಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕಾರ್ಯನಿರ್ವಹಿಸಬೇಕು ಎಂದರು.

  ವಿಧಾನಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ, ಮಾತನಾಡಿ, ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್​ಗಳಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪಾಲಿಕೆ ಆಯೋಜಿಸಬೇಕು. ಕೋವಿಡ್ ಸಂದರ್ಭದಲ್ಲಿ ಅನೇಕ ಜನರು ಸಾವನ್ನಪ್ಪಿದರು. ಹೀಗಾಗಿ, ಅಂತಹ ಪರಿಸ್ಥಿತಿ ಮತ್ತೆ ಮರುಕಳಿಸಬಾರದು. ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

  ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಸೊಳ್ಳೆಗಳ ನಿಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮನೆಗಳಲ್ಲಿ ಸೊಳ್ಳೆ ಪರದೆ, ಸೊಳ್ಳೆ ಬತ್ತಿಗಳನ್ನು ಬಳಸಬೇಕು ಎಂದು ಸಲಹೆ ನೀಡಿದರು.

  ಸಾನ್ನಿದ್ಧ ವಹಿಸಿದ್ದ ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಮುಂದಾಗಬೇಕು. ಉತ್ತಮ ಪರಿಸರವನ್ನು ಅಭಿವೃದ್ಧಿಪಡಿಸುವಲ್ಲಿ ನಿರತರಾಗಬೇಕು ಎಂದು ಹೇಳಿದರು.

  See also  ಬೇರೆ ಬೇರೆ ಮದ್ವೆಯಾಗಿದ್ರೂ ಇಬ್ಬರ ನಡುವೆ ಪ್ರೀತಿ: ಪತ್ನಿ ಬಿಟ್ಟು ಬಂದವನಿಂದಲೇ ನಡೆಯಿತು ದುರಂತ!

  ಆರೋಗ್ಯ ಮೇಲ್ವಿಚಾರಾಣಾಧಿಕಾರಿ ಕೆ.ಐ. ಶ್ಯಾವಿ ಮಾತನಾಡಿ, ಜಿಲ್ಲೆಯಲ್ಲಿ 168 ಡೆಂಘೆ ಪ್ರಕರಣಗಳು ದಾಖಲಾಗಿವೆ.ಡೆಂಘೆ ಕುರಿತು ಭಯಬೇಡ. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

  ಮೇಯರ್ ವೀಣಾ ಬರದ್ವಾಡ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.ಡೆಂಘೆ ಹರಡುವಿಕೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳಿವಳಿಕೆ ಮೂಡಿಸಲಾಯಿತು.

  ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣಾ ಕಲ್ಲಕುಂಟ್ಲ, ಪಾಲಿಕೆ ಸದಸ್ಯರಾದ ಸುನೀತಾ ಬುರಬುರೆ, ಮೀನಾಕ್ಷಿ ವಂಟಮೂರಿ, ಚಂದ್ರಿಕಾ ಮೇಸ್ತ್ರಿ, ಪ್ರೀತಿ ಲದ್ವಾ, ಸಭಾನಾಯಕ ಶಿವು ಹಿರೇಮಠ, ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ, ಪಾಲಿಕೆ ಆರೋಗ್ಯಾಧಿಕಾರಿ ಶ್ರೀಧರ ದಂಡೆಪ್ಪನ್ನವರ ಹಾಗೂ ಇತರರು ಇದ್ದರು. ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಸಿ. ಬೇವೂರ ನಿರೂಪಿಸಿ, ವಂದಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts