More

    ಜನ-ಜಾನುವಾರುಗಳಿಗೆ ನೀರಿನ ಕೊರತೆಯಾಗದಿರಲಿ


    ಚಾಮರಾಜನಗರ : ಬೇಸಿಗೆ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಕೊರತೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಸೂಚನೆ ನೀಡಿದರು.


    ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಟಾಸ್ಕ್‌ಪೋರ್ಸ್ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.


    ಕೊಳ್ಳೇಗಾಲ ಮೀಸಲು ವಿಧಾನಸಭಾಕ್ಷೇತ್ರಕ್ಕೆ ಒಟ್ಟು 25 ಕೋಟಿ ರೂ. ಮುಖ್ಯಮಂತ್ರಿಗಳ ವಿಶೇಷ ಅನುದಾನ, ಇತರೆ ಇಲಾಖೆಗಳಿಗೆ 25 ಕೋಟಿ ರೂ. ಸೇರಿ ಒಟ್ಟು 50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಇದಕ್ಕೆ ಕ್ರಿಯಾಯೋಜನೆ ರೂಪಿಸಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.


    ಬೇಸಿಗೆ ಹಿನ್ನೆಲೆಯಲ್ಲಿ ಯಳಂದೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಬಹುದು ಎಂಬ ಉದ್ದೇಶದಿಂದ ತಾಲೂಕಿನ ಹೊನ್ನೂರು, ಮದ್ದೂರು, ಮಾಂಬಳ್ಳಿ, ಯರಗಂಬಳ್ಳಿ, ಗಣಿಗನೂರು, ಎ. ಕಂದಹಳ್ಳಿ, ಉಪ್ಪಿನಮೋಳೆ, ಬನ್ನಿಸಾರಿಗೆ ಸೇರಿದಂತೆ 8 ಗ್ರಾಮಗಳಿಗೆ ಬೋರ್‌ವೆಲ್ ಕೊರೆಯಿಸಲು ಗುರುತಿಸಲಾಗಿದೆ. ಇದಕ್ಕೆ 25 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಎಲ್ಲ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ತಮ್ಮ ವ್ಯಾಪ್ತಿಯ ಬೋರ್‌ವೆಲ್, ಓವರ್‌ಹೆಡ್ ಟ್ಯಾಂಕ್‌ಗಳ ಸ್ವಚ್ಛತೆ ಕಡೆ ಹೆಚ್ಚಿನ ಗಮನ ನೀಡಬೇಕು, ತಮ್ಮ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.


    ಕೃಷಿ ಇಲಾಖೆಯ ವತಿಯಿಂದ ನೀಡಲಾಗಿರುವ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗಿದ್ದು, ಇವು ಈಗ ಯಾವ ಹಂತದಲ್ಲಿದೆ ಎಂದು ಪರಿಶೀಲಿಸಿ ಮಾಹಿತಿ ನೀಡಬೇಕು. ಪಶು ಇಲಾಖೆ ವತಿಯಿಂದ ಮೇವಿನ ಕಿಟ್ ವಿತರಣೆ ಮಾಡಲಾಗಿದೆ. ಆದರೆ ಈ ಬಗ್ಗೆ ಯಾವ ಜನಪ್ರತಿನಿಧಿಗಳಿಗೂ ಮಾಹಿತಿ ನೀಡಿಲ್ಲ. ತಾಲೂಕಿನಲ್ಲಿ ಯಾವುದೇ ಯೋಜನೆಯನ್ನು ಅನುಷ್ಠಾನ ಮಾಡಿದರೂ ಜನಪ್ರತಿನಿಧಿಗಳ ಗಮನಕ್ಕೆ ಈ ವಿಷಯ ತರಬೇಕು. ಇಷ್ಟಾನುಸಾರ ಅಧಿಕಾರಿಗಳು ಹಂಚಿಕೆ ಮಾಡಿದರೆ ನಾನು ಸಹಿಸುವುದಿಲ್ಲ, ಇದು ಪುನರಾವರ್ತನೆಯಾಗಬಾರದು ಎಂದು ಎಚ್ಚರಿಕೆ ನೀಡಿದರು.


    ಮೇವಿನ ದಾಸ್ತಾನು ಇರಿಸಿಕೊಳ್ಳಬೇಕು. ಪ್ರತಿ ಹೋಬಳಿ ಕೇಂದ್ರಗಳಲ್ಲೂ ಗೋಶಾಲೆ ತೆರೆಯಬೇಕು. ಹೊರ ರಾಜ್ಯಗಳಿಗೆ ಮೇವು ಸಾಗಾಣೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.


    ತಹಸೀಲ್ದಾರ್ ಜಯಪ್ರಕಾಶ್, ಇಒ ಉಮೇಶ್, ಪಶು ಇಲಾಖೆಯ ಡಾ.ಶಿವರಾಜು ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಕೃಷಿ ಇಲಾಖೆಯ ಅಮೃತೇಶ್ವರ, ವೈದ್ಯಾಧಿಕಾರಿ ಡಾ.ಶ್ರೀಧರ್, ತೋಟಗಾರಿಕಾ ಇಲಾಖೆಯ ರಾಜು, ಪಿಎಸ್‌ಐ ನಂದೀಶ್‌ಕುಮಾರ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts