More

    ಆಮಿಷಕ್ಕೊಳಗಾಗದೆ ಮತದಾರರು ನಿರ್ಭೀತಿಯಿಂದ ಹಕ್ಕು ಚಲಾಯಿಸಲಿ

    ಬೇಲೂರು: ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕೆಂಬ ನಿಟ್ಟಿನಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲಾಯಿತು.

    ಪಟ್ಟಣದ ಚನ್ನಕೇಶವಸ್ವಾಮಿ ದೇಗುಲ ಆವರಣದಿಂದ ಆರಂಭವಾದ ಜಾಗೃತಿ ಅಭಿಯಾನ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಸಂದರ್ಭ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

    ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ತಹಸೀಲ್ದಾರ್ ಎಂ.ಮಮತಾ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳವಾಗಬೇಕು ಮತ್ತು ಮತದಾರರು ಆಮಿಷಕ್ಕೆ ಒಳಾಗಾಗದೆ ನಿರ್ಭೀತಿಯಿಂದ ಮತದಾನ ಮಾಡಬೇಕೆಂಬ ನಿಟ್ಟಿನಲ್ಲಿ ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

    ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಮುಂದಿನ ದಿನಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಅರಿವು ಮೂಡಿಸಲಿದ್ದಾರೆ. ಸಂವಿಧಾನದಲ್ಲಿ ಮತದಾನಕ್ಕೆ ಶ್ರೇಷ್ಠ ಸ್ಥಾನವಿದ್ದು ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದೆ ಎಂದರು.

    ತಾಲೂಕು ಪಂಚಾಯತಿ ಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸತೀಶ್ ಮಾತನಾಡಿ, ಮತದಾನ ಒಂದು ಪವಿತ್ರ ಕಾರ್ಯ. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೇ ಮತದಾನದಿಂದ ದೂರ ಇರುವುದು ಶೋಚನೀಯ ಸಂಗತಿ. ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸಬೇಕೆಂಬ ದೃಷ್ಟಿಯಿಂದ ಜಾಗೃತಿ ಅಭಿಯಾನ ಮತ್ತು ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ. ಅಲ್ಲದೆ 37 ಗ್ರಾಪಂ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲಾಗುವುದು. ವಿಶೇಷವಾಗಿ ಮಲೆನಾಡು ಭಾಗದ 81 ಮತಗಟ್ಟೆಗಳಲ್ಲಿ ಕಾಡಾನೆ ಸಮಸ್ಯೆ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಿ ಮತದಾನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.

    ಪುರಸಭೆ ಮುಖ್ಯಾಧಿಕಾರಿ ಇಂದೂ, ಆರೋಗ್ಯಾಧಿಕಾರಿ ಲೋಹಿತ್ ಮತ್ತು ತಾಪಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts