

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಬೇಕು ಎಂಬುದೂ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರಿಂದ ಪೂರಕ ಪ್ರತಿಕ್ರಿಯೆ ಸಿಕ್ಕಿದ್ದರಿಂದ ಮದ್ಯ ಮಾರಾಟಗಾರರ ಸಂಘ ಬುಧವಾರ ನಡೆಸಲು ಉದ್ದೇಶಿಸಿದ್ದ ಮದ್ಯ ಮಾರಾಟ ಬಂದ್(Liquor sellers withdrawn the bandh) ಹಿಂಪಡೆದಿದೆ.
ಇಲಾಖೆಯಲ್ಲಿನ ಭ್ರಷ್ಟಾಚಾರ ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಅಸವಾಗಿತ್ತು. ಖುದ್ದು ಪ್ರಧಾನಿ ಮೋದಿ ವಿಷಯ ಪ್ರಸ್ತಾಪಿಸಿ ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಅವ್ಯವಹಾರ ಎಸಗಲಾಗಿದೆ ಎಂದು ಆರೋಪಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಉನ್ನತ ಮಟ್ಟದ ಅಧಿಕಾರಿಗಳು ಸಭೆ ನಡೆಸಿ ಮದ್ಯ ಮಾರಾಟಗಾರರ ವಿವಿಧ ಸಂಘಗಳ ಪ್ರತಿನಿಧಿಗಳ ಜತೆ ಚರ್ಚಿಸಿದ್ದರು. ಅಂದಿನ ಸಭೆಯಲ್ಲಿ ಭರವಸೆ ನೀಡಿದಂತೆ ಮಂಗಳವಾರ ಮದ್ಯ ಮಾರಾಟಗಾರರ ಸಂಘದ ಪ್ರತಿನಿಧಿಗಳ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಸಭೆ ಯಶಸ್ವಿಯಾಗಿದೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಬೇಕಿದ್ದರೆ ತನಿಖೆ ನಡೆಸಿ ಎಂದು ಸಂಘದ ಪದಾಧಿಕಾರಿಗಳು ಸ್ಪಷ್ಟಪಡಿಸಿದರು. ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು, ಮಾರಾಟಗಾರರ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ ಎನ್ೆರ್ಸ್ಮೆಂಟ್ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಮುಲಾಜಿಲ್ಲದೆ ಕ್ರಮ: ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾವಹಿಸಲು ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು. ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸೆಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲಿಸುತ್ತೇವೆ ಎಂದು ಹೇಳಿದರಲ್ಲದೆ, ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.