More

    ಸಾಲ ಮರುಪಾವತಿ ಕೈಬಿಡುವ ಚಿಂತನೆ

    ಬೆಳಗಾವಿ: ಕರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘ-ಸಂಸ್ಥೆಗಳಲ್ಲಿ ಮಹಿಳೆಯರು ಪಡೆದ ಸಾಲ ಮರುಪಾವತಿ ಕೈಬಿಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದ್ದು, ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

    ನಗರದ ಜಿಲ್ಲಾಸ್ಪತ್ರೆಯ ತುರ್ತು ಘಟಕಕ್ಕೆ ಗುರುವಾರ ಭೇಟಿ ನೀಡಿ, ಕರೊನಾ ವಿಚಾರವಾಗಿ ಕೈಗೊಂಡ ಕ್ರಮಗಳ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಕರೊನಾ ಹಿನ್ನೆಲೆಯಲ್ಲಿ ಸರ್ಕಾರ 21 ದಿನಗಳ ವರೆಗೆ ಲಾಕ್‌ಡೌನ್ ಮಾಡಿದ್ದು, ಇದರಿಂದ ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಕರೊನಾ ನಿಯಂತ್ರಣಕ್ಕೆ ಬರುವವರೆಗೂ ಸಾಲ ಮರುಪಾವತಿ ಕೈಬಿಡುವ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದ ಸಂಘ-ಸಂಸ್ಥೆಗಳ ಸಾಲದ ಸಹಾಯದಿಂದ ಶೇ. 99ರಷ್ಟು ಮಹಿಳೆಯರಿಗೆ ಲಾಭವಾಗಿದೆ. ಆದರೆ, ಇಂತಹ ಪರಿಸ್ಥಿತಿಯಲ್ಲಿ ಯಾರಿಗೂ ಸಾಲ ಮರು ಪಾವತಿಸುವಂತೆ ಒತ್ತಡ ಹಾಕುವಂತಿಲ್ಲ. ಜತೆಗೆ ಸಾಲದ ನೋಟಿಸ್ ನೀಡುವಂತಿಲ್ಲ.

    ಸಂಘ-ಸಂಸ್ಥೆಗಳು ಒತ್ತಾಯ ಪೂರ್ವಕವಾಗಿ ಸಾಲ ವಸೂಲಿ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಕುರಿತು ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ 21 ದಿನಗಳವರೆಗೆ ಲಾಕ್‌ಡೌನ್ ಮಾಡಿದೆ. ಆದರೆ, ಜನ ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿವೆ ಎಂದರು.

    ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಎಸ್ಪಿ ಲಕ್ಷ್ಮಣ ನಿಂಬರಗಿ, ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ, ಡಿಸಿಪಿ ಯಶೋದಾ ಒಂಟಗೋಡಿ ಇತರರು ಇದ್ದರು.

    ಪ್ರವೇಶ ಬಂದ್

    ನೆರೆಯ ಮಹಾರಾಷ್ಟ್ರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಗೆ ಆಗಮಿಸುವುದನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಈಗಾಗಲೇ ಜಿಲ್ಲೆಗೆ ಸಂಪರ್ಕಿಸುವ ಹೆದ್ದಾರಿ ಸೇರಿ ಎಲ್ಲ ಹಂತದ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಆದರೂ ಬೈಕ್ ಮೂಲಕ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಮಾಹಿತಿ ಇದೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸಚಿವೆ ಶಶಿಕಲಾ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts