ಬೆಂಗಳೂರು: ಬಹು ನಿರೀಕ್ಷಿತ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗೆ ಮುಂಬರುವ ಜೂನ್/ಜುಲೈ ಅಥವಾ ಆಗಸ್ಟ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಭರವಸೆ ನೀಡಿದೆ.
ನಿಗದಿತ ಅವಧಿಯಲ್ಲಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಮತ್ತು ಇತರರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗಳು ಸೋಮವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದವು. ಈ ವೇಳೆ ಸರ್ಕಾರದ ಪರ ಹಾಜರಾದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯ ಒದಗಿಸಲಾಗುವುದು ಎಂದರು.
ರಾಜ್ಯ ಚುನಾವಣಾ ಆಯೋಗ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ರಾಜ್ಯ ಸರ್ಕಾರ ನೀಡಿರುವ ವಾಗ್ದಾನವನ್ನು ನ್ಯಾಯಾಲಯ ದಾಖಲಿಸಿಕೊಳ್ಳಬೇಕು. ಸರ್ಕಾರ ಮೀಸಲು ಪಟ್ಟಿ ಒದಗಿಸಿದ ನಂತರ ಅಂತಿಮವಾಗಿ ಆಯೋಗ ಚುನಾವಣೆಯ ದಿನಾಂಕ ನಿಗದಿಪಡಿಸಲಿದೆ. ಒಂದೊಮ್ಮೆ ಸರ್ಕಾರ ವಾಗ್ದಾನದಂತೆ ನಡೆದುಕೊಳ್ಳಲು ವಿಫಲವಾದರೆ, ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಂದುವರಿಸುವ ಸ್ವಾತಂತ್ರ್ಯವನ್ನು ಆಯೋಗಕ್ಕೆ ಕಲ್ಪಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ರಾಜ್ಯ ಸರ್ಕಾರ ತನ್ನ ವಾಗ್ದಾನದಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಚುನಾವಣಾ ಆಯೋಗವು ನ್ಯಾಯಾಂಗ ನಿಂದನೆ ಅರ್ಜಿ ಮುಂದುವರಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ತಿಳಿಸಿ, ಅರ್ಜಿ ಇತ್ಯರ್ಥಪಡಿಸಿತು.
ದಂಡ ವಿಧಿಸಿದ್ದ ಕೋರ್ಟ್: ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಹಿಂದುಳಿದ ವರ್ಗಗಳು ಸೇರಿ ಇತರ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಲು ವಿಫಲವಾಗಿದ್ದರಿಂದ ಕಳೆದ 2020ರ ಡಿಸೆಂಬರ್ನಲ್ಲಿ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿತ್ತು.