ಲೋಕಸಭೆ ಚುನಾವಣೆ ಮತ ಎಣಿಕೆ: ಜೂ. 4ರಂದು ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿ!

144 section
Published on

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್‌ 4ರಂದು ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೂ ಸಹ ಏಪ್ರಿಲ್ 26ರಂದು ಮತದಾನ ನಡೆದಿದ್ದು, ಮತಯಂತ್ರಗಳನ್ನು ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಇರಿಸಲಾಗಿದೆ. ಇನ್ನು ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂ.4ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net