ರಾಹುಲ್ ಗಾಂಧಿ ರಾಜೀನಾಮೆ ನೀಡಲಿ

ಬಾಗಲಕೋಟೆ: ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಮತ್ತು ದೇಶದ ಮತದಾರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಈ ಸೋಲಿನ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಶಾಸಕ ಗೋವಿಂದ ಕಾರಜೋಳ ಆಗ್ರಹಿಸಿದರು.

ಲೋಕಸಭೆಗೆ ನಾಲ್ಕನೇ ಬಾರಿ ಆಯ್ಕೆಯಾದ ಪಿ.ಸಿ. ಗದ್ದಿಗೌಡರ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ಮೂರು ದಿನಗಳಲ್ಲಿ ರಾಜ್ಯದ ಮೈತ್ರಿ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಭವಿಷ್ಯ ನುಡಿದರು.
ಈ ಹಿಂದೆ ಸೋಲಿನ ಹೊಣೆ ಹೊತ್ತು ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ ರಾಜೀನಾಮೆ ನೀಡಿ ಮೌಲ್ಯಾಧಾರಿತ ರಾಜಕಾರಣಕ್ಕೆ ತಲೆಬಾಗಿದ್ದರು. ಅದೇ ರೀತಿ, ರಾಹುಲ್, ಸಿದ್ದರಾಮಯ್ಯ, ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರದ ಮೋದಿ ನಾಯಕತ್ವ ಮೆಚ್ಚಿ ಮತ್ತೊಮ್ಮೆ ದೇಶದ ಜನ ಆಶೀರ್ವಾದ ನೀಡಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪನವರ ಶ್ರಮದಿಂದ ಬಿಜೆಪಿ ಅಧಿಕ ಸ್ಥಾನ ಗೆಲ್ಲಲು ಕಾರಣವಾಗಿದೆ. ಪ್ರಧಾನಿ ಮೋದಿಯವರು ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಮತದಾರ ಪ್ರಭು ಜೈ ಎಂದಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ ಬಳಿಕ ಕಾಂಗ್ರೆಸ್ ಪಕ್ಷ ವಿಸರ್ಜನೆ ಮಾಡಬೇಕೆಂದು ಹೇಳಿದ್ದರು. ಅದನ್ನು ಇಂದು ನರೇಂದ್ರ ಮೋದಿಯವರು ಸಾಕಾರಗೊಳಿಸಿದ್ದಾರೆ. ದೇಶದ 22 ರಾಜ್ಯಗಳಲ್ಲಿ ಕಾಂಗ್ರೆಸ್ ಅಕೌಂಟ್ ಓಪನ್ ಮಾಡಲು ಸಾಧ್ಯವಾಗಿಲ್ಲ ಎಂದು ಕಾರಜೋಳ ಲೇವಡಿ ಮಾಡಿದರು.

Leave a Reply

Your email address will not be published. Required fields are marked *