More

    ಲೋಕ ಸಮರಕ್ಕೆ ಪ್ರಬಲ ಅಭ್ಯರ್ಥಿ ಕಣಕ್ಕೆ

    ಬೆಳಗಾವಿ: ಮುಂಬರಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಯಾವುದೇ ಕಾರಣಕ್ಕೂ ಹೊಂದಾಣಿಕೆ ರಾಜಕಾರಣಕ್ಕೆ ಅವಕಾಶ ಕಲ್ಪಿಸಿಕೊಡುವುದಿಲ್ಲ ಎಂದು ಅಭ್ಯರ್ಥಿ ಆಯ್ಕೆ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

    ನಗರದ ಕೆಪಿಸಿಸಿ ಕಚೇರಿಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಾಗಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಉಪ ಚುನಾವಣೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಯಶಸ್ವಿಯಾಗಿ ಎದುರಿಸುತ್ತೇವೆ ಎಂದು ತಿಳಿಸಿದರು.

    ಇನ್ನೊಂದು ಸಭೆ: ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಹಾಲಿ ಮತ್ತು ಮಾಜಿ ಶಾಸಕರು ಸೇರಿದಂತೆ 8 ರಿಂದ 10 ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಯಾರು ಸೂಕ್ತ ಎಂದು ನಿರ್ದರಿಸಲು ವಾರದ ಬಳಿಕ ಮತ್ತೆ ಸಭೆ ಸೇರುತ್ತವೆ. ಕಾಂಗ್ರೆಸ್‌ನಿಂದ ಯಾರನ್ನು ಕಣಕ್ಕಿಳಿಸಿದರೆ ಸೂಕ್ತ ಎಂಬ ಕುರಿತು ಎಲ್ಲ ಸಮುದಾಯದ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು, ವಿಧಾನಸಭಾ ಕ್ಷೇತ್ರಗಳಲ್ಲಿನ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಳ್ಳುತ್ತೇವೆ. ಚುನಾವಣೆಯಲ್ಲಿ ಸ್ಪರ್ಧಿಸಲು ಹೆಚ್ಚಿನ ಆಕಾಂಕ್ಷಿಗಳಿಂದ ಅರ್ಜಿ ಬರುವುದು ಸಹಜ. ಹೀಗಾಗಿ ಅಂತಿಮ ಅಭ್ಯರ್ಥಿ ಆಯ್ಕೆ ಕುರಿತು ಪರಾಮರ್ಶಿಸಿ ಮತ್ತೊಮ್ಮೆ ಕೆಪಿಸಿಗೆ ಶಿಫಾರಸು ಮಾಡುತ್ತೇವೆ ಎಂದರು.

    ಯಾರನ್ನೂ ಕಡೆಗಣಿಸಿಲ್ಲ: ಪಕ್ಷದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮತ್ತು ಚುನಾವಣೆ ಎದುರಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಯಾವುದೇ ಹಿರಿಯ ನಾಯಕರನ್ನೂ ಪಕ್ಷ ಕಡೆಗಣಿಸಿಲ್ಲ. ಹೀಗಾಗಿ ಈ ಉಪ ಚುನಾವಣೆಯಲ್ಲಿ ಯಾವ ಸಮುದಾಯದ ಅಭ್ಯರ್ಥಿ ನಿಲ್ಲಿಸಬೇಕು ಎಂಬುದನ್ನು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ನಿರ್ಧರಿಸಲಿದ್ದಾರೆ ಎಂದರು.

    ರಾಜಕೀಯ ಪ್ರೇರಿತ ನಿರ್ಧಾರ: ಉಪ ಚುನಾವಣೆಗಳಲ್ಲಿ ಮತದಾರರನ್ನು ಸೆಳೆಯಲು ಬಿಜೆಪಿ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದೆ. ಹಾಗಾಗಿ, ಇದು ರಾಜಕೀಯ ಪ್ರೇರಿತ ನಿರ್ಧಾರ ಎನ್ನಬಹುದು. ಈ ವಿಷಯದಲ್ಲಿ ನಮ್ಮ ಪಕ್ಷ ಕೈಗೊಳ್ಳುವ ನಿಲುವಿಗೆ ನಾವೆಲ್ಲ ಬದ್ಧರಾಗಿದ್ದೇವೆ ಎಂದು ಎಂ.ಬಿ. ಪಾಟೀಲ ತಿಳಿಸಿದರು. ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಮಾಜಿ ಶಾಸಕ ಫಿರೋಜ್ ಶೇಠ್, ನಗರ ಘಟಕದ ಅಧ್ಯಕ್ಷ ರಾಜು ಶೇಠ್, ಅರವಿಂದ ದಳವಾಯಿ ಇದ್ದರು.

    ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಆಯ್ಕೆ ಕುರಿತು ಎಲ್ಲರೊಂದಿಗೆ ಚರ್ಚಿಸಲಾಗುತ್ತಿದೆ. ಕೆಲ ಆಕಾಂಕ್ಷಿಗಳು ಸ್ಪರ್ಧೆಗೆ ಮುಂದಾಗಿದ್ದಾರೆ. ಒಂದು ವೇಳೆ ಪಕ್ಷದ ಹೈಕಮಾಂಡ್ ನನಗೆ ಸೂಚಿಸಿದರೆ ಸ್ಪರ್ಧಿಸುತ್ತೇನೆ. ಒಟ್ಟಿನಲ್ಲಿ ಪಕ್ಷದ ತೀರ್ಮಾನಕ್ಕೆ ನಾವೆಲ್ಲ ಬದ್ಧ.
    | ಸತೀಶ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts