

PM Modi: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ 73ನೇ ಹುಟ್ಟುಹಬ್ಬಕ್ಕೆ ಮಂಗಳವಾರ(ಅ. 07) ಪ್ರಧಾನಿ ಮೋದಿ ಶುಭಕೋರಿದ್ದು, ಮುಂಬರುವ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗೆ ಭಾರತದಲ್ಲಿ ನಿಮ್ಮನ್ನು ಸ್ವಾಗತಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವಾಗಿ ಜೀವಿಸಲಿ ಎಂದು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದೇನೆ. ಮುಂಬರುವ ವರ್ಷಗಳಲ್ಲಿ ಭಾರತ-ರಷ್ಯಾ ಸಂಬಂಧಗಳನ್ನು ಗಾಢವಾಗಿಸಲು ಅವರ ವೈಯಕ್ತಿಕ ಬದ್ಧತೆಯನ್ನು ನಾನು ತುಂಬಾ ಪ್ರಶಂಸಿಸುತ್ತೇನೆ. ಭಾರತದಲ್ಲಿ ಅವರನ್ನು ಸ್ವಾಗತಿಸಲು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
ಇದೇ ವೇಳೆ ದೂರವಾಣಿ ಸಂಭಾಷಣೆಯಲ್ಲಿ ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿನ ಪ್ರಗತಿಯನ್ನು ಪರಿಶೀಲಿಸಿದ್ದು, ಭಾರತ-ರಷ್ಯಾ ವಿಶೇಷ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದರು ಎಂದು ಮೂಲಗಳು ತಿಳಿಸಿವೆ. ಭಾರತ-ರಷ್ಯಾ ವಾರ್ಷಿಕ ಶೃಂಗಸಭೆ ಡಿಸೆಂಬರ್ ಆರಂಭದಲ್ಲಿ ನಡೆಯಲಿದೆ ಎನ್ನಲಾಗಿದೆ. (ಏಜೆನ್ಸೀಸ್)