ಅರಸೀಕೆರೆ: ತಾಲೂಕಿನ ಬಾಣಾವರ ಹೋಬಳಿ ಚಿಕ್ಕಣ್ಣನಕೊಪ್ಪಲು ಗ್ರಾಮದಲ್ಲಿ ಬುಧವಾರ ರಾತ್ರಿ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್ ಸ್ಫೋಟಿಸಿ ಮನೆ ಬೆಂಕಿಗಾಹುತಿಯಾಗಿದೆ.
ಸ್ಫೋಟದ ತೀವ್ರತೆಗೆ ಗ್ರಾಮದ ಯಶೋಧಮ್ಮ ಅವರ ಮನೆ ಸಂಪೂರ್ಣ ಸುಟ್ಟು ಹೋಗಿದೆ. ಘಟನೆ ಸಂಭವಿಸಿದಾಗ ಚೀಟಿ ಹಣ ಪಾವತಿಸಲು ಯಶೋಧಮ್ಮ ಮನೆಯಿಂದ ಹೊರಗೆ ತೆರಳಿದ್ದರು, ಮಕ್ಕಳಿಬ್ಬರು ಚಿಕ್ಕಪ್ಪನ ಮನೆಗೆ ತೆರಳಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.ಮಾಹಿತಿ ಪಡೆದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ತಹಬದಿಗೆ ತರುವಲ್ಲಿ ಸಫಲರಾದರು.
ಮನೆಯಲ್ಲಿಟ್ಟಿದ್ದ ಕೊಬ್ಬರಿ, ದವಸ, ಧಾನ್ಯ, ಬಟ್ಟೆ, ಬರೆ,ನಗದು, ಚಿನ್ನಾಭರಣಗಳು ಸಂಪೂರ್ಣ ಸುಟ್ಟು ಹೋಗಿವೆ. ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಮನೆ ಕಳೆದುಕೊಂಡಿರುವ ಕುಟುಂಬ ಸದಸ್ಯರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.