ಜಿಲ್ಲೆಯಲ್ಲಿ ಕಾಂಗ್ರೆಸ್ ಅಸ್ತಿತ್ವಕ್ಕೆ ಧಕ್ಕೆ ಇಲ್ಲ

ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಅಸ್ತಿತ್ವಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆಯಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವಾಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಮಂಡ್ಯ ಲೋಕಸಭಾ ಚುನಾವಣೆಗೆ ಸುಮಲತಾ ಸ್ಪರ್ಧೆ ಕುರಿತ ಪ್ರಶ್ನೆಗೆ ಹೈಕಮಾಂಡ್ ಹಾಗೂ ಎರಡೂ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಬಡ್ತಿ ಮೀಸಲಾತಿ ವಿಚಾರ ಈಗ ಕಾನೂನು ಅಂಗಳದಲ್ಲಿದೆ. ರಾಜ್ಯ ಸರ್ಕಾರ ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಕಿಯೋನಿಕ್ಸ್‌ನಿಂದ ಆಗಿರುವ ಅನ್ಯಾಯದ ವಿರುದ್ಧ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಡಿ.ಗಂಗಾಧರ್, ಮನ್‌ಮುಲ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಸೋಮನಹಳ್ಳಿ ಅಂದಾನಿ , ಕಬ್ಬಾಳಯ್ಯ, ಅಂಬರೀಷ್, ರವಿಕುಮಾರ್, ಮಾದೇಶ್ ಇದ್ದರು.

ಪ್ರಧಾನಿ ಮೋದಿ ಸ್ಪರ್ಧಿಸಿದರೂ ಸ್ವಾಗತ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪರ್ಧೆ ಮಾಡಿದರೂ ಅವರನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಚುನಾವಣೆಯಲ್ಲಿ ಯಾರೇ ನಿಂತರೂ ಸ್ಪರ್ಧೆ ಮಾಡಲೇಬೇಕು ಎಂದು ಖರ್ಗೆ ವಿರುದ್ಧ ಲೋಕ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಾರೆಂಬ ಪ್ರಶ್ನೆಗೆ ಉತ್ತರಿಸಿದರು.

Leave a Reply

Your email address will not be published. Required fields are marked *