More

    ಮಾಗಡಿ ತಾಲೂಕಿನ 68 ಕೆರೆಗಳಿಗೆ ಹೇಮಾವತಿ ನೀರು: ಡಿಸಿಎಂ ಮಾಹಿತಿ

    ರಾಮನಗರ: ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕುಗಳ 83 ಕೆರೆಗಳಿಗೆ ಹೇಮಾವತಿ ನದಿಯಿಂದ ಕುಡಿಯುವ ನೀರು ಹರಿಸುವ 450 ಕೋಟಿ ರೂ. ವೆಚ್ಚದ ಪರಿಷ್ಕೃತ ಶ್ರೀರಂಗ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

    ಬೆಂಗಳೂರಿನಲ್ಲಿ ಸಂಪುಟ ಸಭೆಯ ನಂತರ ಮಾತನಾಡಿದ ಡಿಸಿಎಂ, ಈಗಾಗಲೇ ಯೋಜನೆಗೆ 277 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಯೋಜನೆಗೆ ಮತ್ತಷ್ಟು ಸಂಪನ್ಮೂಲದ ಅಗತ್ಯವಿತ್ತು. ಹೀಗಾಗಿ ಅಗತ್ಯವಿದ್ದ 173 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಈ ಬಗ್ಗೆ ಮಾಡಿದ್ದ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದಕ್ಕಾಗಿ ಕೃತಜ್ಞತೆ ಸಲ್ಲಿಸುವೆ ಎಂದರು.
    ಮೊದಲೇ ಆರಂಭವಾಗಿದ್ದ ಯೋಜನೆಯ ಕಾಮಗಾರಿ ಅತ್ಯಂತ ವೇಗದಲ್ಲಿ ನಡೆಯುತ್ತಿದ್ದು, ಅಗತ್ಯವಿದ್ದ ಮತ್ತಷ್ಟು ನಿರ್ವಹಣಾ ಹಾಗೂ ಪೂರಕ ವ್ಯವಸ್ಥೆಗಳನ್ನು ಮಾಡುವ ಉದ್ದೇಶದಿಂದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಪಡೆಯಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

    ಪಂಪ್‌ಹೌಸ್ ಮತ್ತು ವಿದ್ಯುತ್ ಸಬ್‌ಸ್ಟೇಷನ್: 195 ಕಿ.ಮೀ. ದೂರದಿಂದ ನೀರು ಪೂರೈಕೆಯಾಗಬೇಕಿದ್ದು, ಅದಕ್ಕಾಗಿ ಪ್ರತ್ಯೇಕ ಪಂಪ್‌ಹೌಸ್ ಮತ್ತು ವಿದ್ಯುತ್ ಸಬ್‌ಸ್ಟೇಷನ್ ನಿರ್ಮಿಸಲು ಉದ್ದೇಶಿಸಲಾಗಿದೆ. ಜತೆಗೆ, ನೀರನ್ನು ಸರಬರಾಜು ಮಾಡುವ ಪಿವಿಸಿ ಪೈಪುಗಳು ವಿರಳವಾಗಿದ್ದು, ಅವುಗಳನ್ನು ಕಾಲಮಿತಿಯೊಳಗೆ ಖರೀದಿಸಿ ಯೋಜನೆ ಕಾರ್ಯಗತ ಮಾಡಬೇಕಾಗಿದೆ. ವಿವಿಧೆಡೆ ಭೂಸ್ವಾಧೀನ ಕಷ್ಟವಾಗಿರುವ ಕಾರಣ ಯೋಜನೆಯ ವೆಚ್ಚ ಹೆಚ್ಚಳವಾಗಿದೆ. ಒಟ್ಟಾರೆ ಕಾವೇರಿ ನೀರಾವರಿ ನಿಗಮ ಸಲ್ಲಿಸಿರುವ ಪರಿಷ್ಕೃತ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

    ರಾಜ್ಯದ ಯಾವುದೇ ಭಾಗದಲ್ಲೂ ಕುಡಿಯುವ ನೀರಿನ ಬಿಕ್ಕಟ್ಟು ಇರಬಾರದು ಎಂಬುದೇ ಸರ್ಕಾರದ ಉದ್ದೇಶವಾಗಿದೆ. ಹೀಗಾಗಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವುದರ ಜತೆಗೆ, ಈಗಾಗಲೇ ಕಾರ್ಯಗತವಾಗುತ್ತಿರುವ ಯೋಜನೆಗಳನ್ನು ವೇಗವಾಗಿ ಮುಗಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

    ಗರಿಗೆದರಲಿದೆ ಕೃಷಿ ಚಟುವಟಿಕೆ: ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯಿಂದ ಎರಡೂ ತಾಲೂಕುಗಳ ಕೆರೆಗಳಿಗೆ ನೀರು ಹರಿಯಲಿದೆ. ಈ ಯೋಜನೆಯಿಂದ ಎರಡೂ ತಾಲೂಕುಗಳ ಜಲಕ್ಷಾಮ ಶಾಶ್ವತವಾಗಿ ನಿವಾರಣೆಯಾಗಲಿದೆ. ಇದರಿಂದ ಆ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಹಾಗೂ ಕೃಷಿ ಚಟುವಟಿಕೆ ಉತ್ತಮವಾಗಿ ಗರಿಗೆದರಲಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

    172.19 ಕ್ಯೂಸೆಕ್ ನೀರು: ಉದ್ದೇಶಿತ ಪ್ರದೇಶಗಳಿಗೆ ಒಟ್ಟು 172.19 ಕ್ಯೂಸೆಕ್ ನೀರು ಹರಿಸಲಾಗುವುದು. ಮಾಗಡಿ ತಾಲೂಕಿನ 68 ಕೆರೆಗಳು ಹಾಗೂ ಕುಣಿಗಲ್ ತಾಲೂಕಿನ ಹುತ್ತರಿದುರ್ಗ ಹೋಬಳಿಯ 15 ಕೆರೆಗಳಿಗೆ ನೀರು ಹರಿಯಲಿದೆ. ಇದರಿಂದ ಸುಮಾರು 289 ಗ್ರಾಮಗಳಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಅಭಾವ ನೀಗಲಿದೆ ಎಂದು ಡಾ. ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

    ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ಹರಿಸುವ ತುಂಬಿಸುವ ಶ್ರೀರಂಗ ಏತ ನೀರಾವರಿ ಯೋಜನೆಯ ಮುಂದುವರಿದ ಕಾಮಗಾರಿಗೆ ಅಗತ್ಯವಿದ್ದ 175 ಕೋಟಿ ರೂ. ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಹಾಗೂ ಡಿಸಿಎಂ ಅಶ್ವತ್ಥನಾರಾಯಣ, ಜಲ ಸಂಪನ್ಮೂಲ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಡಿಸಿಎಂ ಇದೇ ತಾಲೂಕಿನವರಾಗಿರುವ ಕಾರಣ ಜಿಲ್ಲೆ ಮತ್ತು ತಾಲೂಕಿನ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದಾರೆ. ಅವರಿಗೆ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ.
    ಎ. ಮಂಜುನಾಥ್ ಶಾಸಕ, ಮಾಗಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts