

ಮುಂಬೈ: ಎಂಎಸ್ಆರ್ಟಿಸಿ ಬಸ್‌ಗಳ ಮೇಲೆ ದಾಳಿ ಮಾಡಿದ ಪರಿಣಾಮ ಕರ್ನಾಟಕಕ್ಕೆ ತನ್ನ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ತಿಳಿಸಿದ್ದಾರೆ. ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಬಸ್‌ನ ಮೇಲೆ ಶುಕ್ರವಾರ (ಫೆಬ್ರವರಿ 21) ಕನ್ನಡ ಪರ ಹೋರಾಟಗಾರರು ದಾಳಿ ನಡೆಸಿದ ಬೆನ್ನಲ್ಲೇ ಈ ಆದೇಶ ಹೊರಡಿಸಲಾಗಿದೆ.
ಬಸ್ ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೆ ಕಪ್ಪು ಮಸಿ ಬಳಿದು ಹಲ್ಲೆ ನಡೆಸಿದ್ದಾರೆ ಎಂದು ಸಚಿವರು ಆರೋಪಿಸಿದ್ದಾರೆ. ಈ ಘಟನೆಯ ಬಗ್ಗೆ ಕರ್ನಾಟಕ ಸರ್ಕಾರದಿಂದ ಸ್ಪಷ್ಟನೆ ಬರುವವರೆಗೂ ಕರ್ನಾಟಕಕ್ಕೆ ಬಸ್ ಸೇವೆಗಳನ್ನು ಪುನರಾರಂಭಿಸುವುದಿಲ್ಲ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮತ್ತು ನೌಕರರ ಸುರಕ್ಷತೆಯ ದೃಷ್ಟಿಯಿಂದ ಕರ್ನಾಟಕಕ್ಕೆ ಹೋಗುವ ಎಲ್ಲಾ ರಾಜ್ಯ ಸಾರಿಗೆ ಬಸ್‌ಗಳ ಸಂಚಾರವನ್ನು ಅನಿರ್ದಿಷ್ಟಾವಧಿಗೆ ರದ್ದುಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮರಾಠಿಗರ ದೌರ್ಜನ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಚಿತ್ರದುರ್ಗದಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಐಮಂಗಲ ಟೋಲ್ ಬಳಿ ಮಹಾರಾಷ್ಟ್ರ ಬಸ್ ತಡೆದು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಮೂಲದ ಬಸ್ ಮತ್ತು ಚಾಲಕನ ಮೇಲೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಇದೀಗ ಇದೇ ಘಟನೆಯಿಂದ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ತನ್ನ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ.