More

    ಅತಿಥಿ ಉಪನ್ಯಾಸಕರು ಕೆಲಸಕ್ಕೆ ಹಾಜರಾಗದಿದ್ದರೆ ಪರ್ಯಾಯ ವ್ಯವಸ್ಥೆ ಮಾಡಿ: ಕಾಲೇಜುಗಳಿಗೆ ಸರ್ಕಾರ ಸೂಚನೆ

    ಬೆಂಗಳೂರು ಅತಿಥಿ ಉಪನ್ಯಾಸಕರು ಜ.1ರಿಂದ ತರಗತಿಗಳಿಗೆ ಹಾಜರಾಗದಿದ್ದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆಯು ಎಚ್ಚರಿಕೆ ನೀಡಿದೆ.

    ಈ ಸಂಬಂಧ ರಾಜ್ಯದ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಪತ್ರ ಬರೆದಿರುವ ಕಾಲೇಜು ಶಿಕ್ಷಣ ಇಲಾಖೆ ಆಡಳಿತಾಧಿಕಾರಿಗಳು, 2023-24ನೇ ಸಾಲಿನಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿ ಆಯ್ಕೆ ಮಾಡಿಕೊಳ್ಳಲಾಗಿದೆ. ಆದರೆ, ಅತಿಥಿ ಉಪನ್ಯಾಸಕರು ನ.23ರಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡುತ್ತಿದ್ದಾರೆ.

    ಇದಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವರು ಡಿ.29ರಂದು ಅತಿಥಿ ಉಪನ್ಯಾಸಕ ಸಂಘಟನೆಗಳೊಂದಿಗೆ ಸಭೆ ನಡೆಸಿ ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತರಗತಿಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರನ್ನು ತೆಗೆದುಕೊಳ್ಳದಿದ್ದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

    ಆದ್ದರಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಜ.1ರಂದು ತರಗತಿಗೆ ಹಾಜರಾಗಿರುವ ಬಗ್ಗೆ ವಿವರಗಳನ್ನು ಅಂದು ಮಧ್ಯಾಹ್ನ 2 ಗಂಟೆಯೊಳಗೆ ಸಲ್ಲಿಸುವಂತೆ ಎಲ್ಲ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

    ಸರ್ಕಾರವು ಅತಿಥಿ ಉಪನ್ಯಾಸಕರ ಜಾಗಕ್ಕೆ ಮತ್ತೊಬ್ಬ ಅತಿಥಿ ಉಪನ್ಯಾಸಕರನ್ನು ನೇಮಿಸಲು ಸಾಧ್ಯವಿಲ್ಲ. ಕಾಯಂ ಸಿಬ್ಬಂದಿಯನ್ನೇ ನೇಮಿಸಬೇಕು. ಒಂದು ವೇಳೆ ಮತ್ತೊಬ್ಬ ಅತಿಥಿ ಉಪನ್ಯಾಸಕರನ್ನು ನೇಮಿಸಿದರೆ ಹೈಕೋರ್ಟ್ ಆದೇಶ ಉಲ್ಲಂಘನೆಯಾಗಲಿದೆ.
    – ಶಿವಪ್ಪ, ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts