ಅಪರಾಧ ಕೃತ್ಯಗಳ ಮಾಹಿತಿ ನೀಡಿ

ಮಳವಳ್ಳಿ: ಅಪರಾಧ ಕೃತ್ಯಗಳ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಅಕ್ರಮ ಚಟುವಟಿಕೆಗಳು ಕಂಡುಬಂದಾಗ ಕೂಡಲೇ ಆಯಾ ವ್ಯಾಪ್ತಿಯ ಬೀಟ್ ಪೊಲೀಸರಿಗೆ ಮಾಹಿತಿ ನೀಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ್ ಮಾಹಿತಿ ನೀಡಿದರು.

ಪಟ್ಟಣದ ರೈತ ಸಮುದಾಯ ಭವನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು.

ಪೊಲೀಸರು ಮತ್ತು ಜನ ಸಾಮಾನ್ಯರೊಡನೆ ಉತ್ತಮ ಬಾಂಧವ್ಯ ಮೂಡಿದಾಗ ಮಾತ್ರ ಅಪರಾಧ ಚಟುವಟಿಕೆಗಳಿಗೆ ನಿಯಂತ್ರಣ ಹಾಕಲು ಸಾಧ್ಯವಾಗುತ್ತದೆ. ಪೊಲೀಸ್ ಇಲಾಖೆ ವತಿಯಿಂದ ಗ್ರಾಮವಾಸ್ತವ್ಯ ಕೈಗೊಳ್ಳಲಾಗಿದ್ದು, ಜನರು ತಮ್ಮ ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಪೊಲೀಸರ ಗಮನಕ್ಕೆ ತಂದರೆ, ಅವುಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.

ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ದ್ವಿಚಕ್ರ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಚಲಾಯಿಸುವುದರ ಜತೆಗೆ ವಾಹನಗಳ ಸೂಕ್ತ ದಾಖಲಾತಿಗಳನ್ನು ಹೊಂದಿರಬೇಕು ಎಂದರು.

ಇತ್ತೀಚಿನ ವರ್ಷಗಳಲ್ಲಿ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಹಣವನ್ನು ದ್ವಿಗುಣ ಮಾಡುತ್ತೇವೆಂದು ಹೇಳುವ ಕಂಪನಿಗಳಿಗೆ ಹಣ ಕಟ್ಟಬೇಡಿ. ಉದ್ಯೋಗ ಕೊಡಿಸುವ ನೆಪದಲ್ಲಿ ಹಣ ಕೇಳುವ ವ್ಯಕ್ತಿಗಳ ಬಗ್ಗೆ ಸಂಶಯ ಬಂದರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಸಲಹೆ ನೀಡಿದರು.

ಟ್ರಾಫಿಕ್ ಸಮಸ್ಯೆ ನಿವಾರಿಸಿ: ಮೊಬೈಲ್‌ನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ. ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ. ಸಿಗ್ನಲ್ ಲೈಟ್ ಸರಿಪಡಿಸುವುದರ ಜತೆಗೆ ಟ್ರಾಫಿಕ್ ಸಮಸ್ಯೆ ನಿವಾರಿಸಿ. ಪಟ್ಟಣ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಾಗಿರುವ ಕಳ್ಳತನ ಪ್ರಕರಣಗಳು ಹಾಗೂ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ನಾಗರಿಕ ಸಮಿತಿ ಸದಸ್ಯರು ಇದೇ ವೇಳೆ ಎಸ್ಪಿ ಅವರಿಗೆ ಮನವಿ ಮಾಡಿದರು.

ಸಭೆಯಲ್ಲಿ ಡಿವೈಎಸ್‌ಪಿಗಳಾದ ಶೈಲೇಂದ್ರ, ನರಸಿಂಹ, ಇನ್ಸ್‌ಪೆಕ್ಟರ್‌ಗಳಾದ ರಮೇಶ್, ಮಂಜುನಾಥ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *