

ಕಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರವು ಈಗಾಗಲೇ ಜನರ ಕೆಂಗಣ್ಣಿಗೆ ಗುರಿಯಾಗಿದ್ದು, ಡ್ಯಾಮೇಜ್ ಕಂಟ್ರೋಲ್ ಮಾಡಲು ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದೆ. ಇದೀಗ ರಾಜ್ಯದಲ್ಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಇಂದು (ಸೆಪ್ಟೆಂಬರ್ 03) ವಿಧಾನಸಬೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದೆ.
ಪಶ್ಚಿಮ ಬಂಗಾಳದ ಕಾನೂನು ಸಚಿವ ಮೊಲೊಯ್ ಘಾಟಕ್ ಅವರು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿದರು. ಮಸೂದೆ ಮೇಲೆ ಚರ್ಚೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಶಾಸಕರಾದ ಸಿಖಾ ಚಟರ್ಜಿ ಮತ್ತು ಅಗ್ನಿಮಿತ್ರ ಪೌಲ್ ಈ ಬಗ್ಗೆ ಮಾತನಾಡಲಿದ್ದಾರೆ.
ಪ್ರಸ್ತಾವಿತ ಮಸೂದೆ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಮೃತಪಟ್ಟರೆ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಅವಕಾಶ ಇದೆ. ಅಲ್ಲದೇ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ಅಪರಾಧಿಗಳಿಗೆ ಪೆರೋಲ್ ನೀಡದೆ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಪ್ರಸ್ತಾವ ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.
ಅಪರಾಜಿತ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನು ಮತ್ತು ತಿದ್ದುಪಡಿ ಮಸೂದೆ)–2024 ಅನ್ನು ಸರ್ಕಾರ ಮಂಡಿಸಿದೆ. ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಹೊಸ ಶಿಕ್ಷೆಗಳನ್ನು ಇದರಲ್ಲಿ ಪರಿಚಯಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಒತ್ತು ನೀಡುವ ಗುರಿಯನ್ನು ಇದು ಹೊಂದಿದೆ.