ನವದೆಹಲಿ: ಕುಟುಂಬವನ್ನು ಪೋಷಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ 7 ಮಕ್ಕಳನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಸಜ್ಜದ್ ಖೋಖರ್ ತನ್ನ ಪತ್ನಿ ಕೌಸರ್ (42) ನಾಲ್ವರು ಪುತ್ರಿಯರು, ಮೂವರು ಪುತ್ರರನ್ನು ಅಮಾನುಷವಾಗಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ಎಸ್. ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?
ಈ ಕುರಿತು ಪ್ರತಿಕ್ರಿಯಿಸಿರುವ ಸಿಂಧ್ ಪ್ರಾಂತ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಸರಿಯಾದ ಕೆಲಸವಿಲ್ಲದೆ ಆರ್ಥಿಕ ದುಸ್ಥಿತಿಯಿಂದ ಬಳಲುತ್ತಿದ್ದ ಆರೋಪಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಹಣದ ವಿಚಾರವಾಗಿ ತನ್ನ ಪತ್ನಿ ಜೊತೆ ಅನೇಕ ಬಾರಿ ಜಗಳವಾಡಿದ್ದಾನೆ. ಗುರುವಾರ ಸಂಜೆ ಇದೇ ವಿಚಾರವಾಗಿ ದಂಪತಿಯ ನಡುವೆ ಜಗಳ ನಡೆದಿದ್ದು, ಇದಾದ ಕೆಲವೇ ಹೊತ್ತಿನಲ್ಲಿ ಆರೋಪಿ ಕೊಡಲಿಯಿಂದ ಪತ್ನಿ ಹಾಗೂ ಮಕ್ಕಳನ್ನು ಹತ್ಯೆ ಮಾಡಿದ್ದಾನೆ.
ಹತ್ಯೆ ಮಾಡಿದ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸಿಂಧ್ ಪ್ರಾಂತ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.