ಹಬೊಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ

march 21 kottur 01
ಅಧ್ಯಕ್ಷ ವೀರೇಶ ಸ್ವಾಮಿ.
Published on

ಕೊಟ್ಟೂರು: ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ ಕ್ಷೇತ್ರ ಬಿಜೆಪಿ ವಶವಾಗಲಿದೆ ಎಂದು ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಮಂಡಲ ಅಧ್ಯಕ್ಷ ವೀರೇಶ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಗೆಲ್ಲುವ ಎಲ್ಲ ಲಕ್ಷಣಗಳಿರುವುದರಿಂದ ಸಹಜವಾಗಿ ಸ್ಪರ್ಧಾಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಒಗ್ಗಟ್ಟಿನಿಂದ ಗೆಲ್ಲಿಸಲು ಶ್ರಮಿಸುತ್ತೇವೆ ಎಂದರು.

ಎಲ್.ಭೀಮಾನಾಯ್ಕ ಎಂಬುವರು ತಾವೇ ಅಭ್ಯರ್ಥಿ ಎಂಬಂತೆ ಕ್ಷೇತ್ರದಲ್ಲೆಡೆ ಬ್ಯಾನರ್, ಕಟೌಟ್‌ಗಳನ್ನು ಹಾಕಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಭೀಮಾನಾಯ್ಕ ಅವರು ತಾಲೂಕು, ಜಿಲ್ಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿಲ್ಲ. ಪಕ್ಷದಲ್ಲಿ ಗುರುತಿಸಿಕೊಂಡಿಲ್ಲ. ಇತ್ತೀಚಿಗೆ ಹಗರಿಬೊಮ್ಮನಹಳ್ಳಿಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಗೂ ಅವರಿಗೆ ಆಹ್ವಾನವಿರಲಿಲ್ಲ. ಅವರ ವಿಷಯಕ್ಕೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಎಂದು ಸ್ಪಷ್ಟಪಡಿಸಿದರು.

ಸ್ಥಳೀಯರು ಮತ್ತು ಹೊರಗಿನವರು ಎಂಬುದು ಮುಖ್ಯವಲ್ಲ. ಗೆಲ್ಲುವ ಅಭ್ಯರ್ಥಿ ಮುಖ್ಯ ಮತ್ತು ಪಕ್ಷ ಗೆಲ್ಲಬೇಕೆಂಬುದು ನಮ್ಮ ಗುರಿ. ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರೂ ಅವರ ಪರವಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net