More

    ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ-ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

    ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಾನು ಯು ಟರ್ನ್‌ ಹೊಡೆಯುವ ಗಿರಾಕಿ ಅಲ್ಲ ಎಂದು ಪ್ರತಿಕ್ರಿಯಿಸಿದರು.

    ಜೆ.ಪಿ. ಭವನದಲ್ಲಿ ಜೆಡಿಎಸ್ ಡಿಜಿಟಲ್ ಯೋಧರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.

    ನಾನು ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಇದನ್ನು ಹಿಂದೆಯೂ ಹೇಳಿದ್ದೆ. ಅತ್ಯಂತ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದೇನೆ. ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ. ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ 2019ರಲ್ಲಿ ನಾನು ಕ್ಷೇತ್ರದ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ, ಕಾರ್ಯಕರ್ತರ ಪ್ರೀತಿ ಇದೆ ಎಂದು ಹೇಳಿದರು.

    ಪಕ್ಷ ಸಂಘಟನೆಗಾಗಿ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ. ಜೆಡಿಎಸ್-ಬಿಜೆಪಿ ಮೈತ್ರಿ ಬಲಪಡಿಸಬೇಕು. ಮತ್ತೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಹೀಗಾಗಿ ನನ್ನ ಗಮನ ರಾಜ್ಯದ 28 ಲೋಸಭೆ ಕ್ಷೇತ್ರಗಳ ಕಡೆಯೂ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

    ಮಂಡ್ಯ, ಹಾಸನದಲ್ಲಿ ಜೆಡಿಎಸ್ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ವಿರೋಧವಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ, ಕೇಂದ್ರದ ನಾಯಕರು, ನಮ್ಮ ಪಕ್ಷದ ವರಿಷ್ಠರು ಅತೀ ಶೀಘ್ರದಲ್ಲೇ ಇಂತಹ ಎಲ್ಲ ಪ್ರಶ್ನೆಗಳಿಗೂ ತೆರೆ ಎಳೆಯುತ್ತಾರೆ. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಬೇಕು, ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದರು.
    ಮಂಡ್ಯ ಜೆಡಿಎಸ್ ನಲ್ಲಿ ಗಂಡಸರು ಯಾರೂ ಇಲ್ವಾ? ಎಂಬ ಮದ್ದೂರು ಶಾಸಕ ಕದಲೂರು ಉದಯ್ ಹೇಳಿಕೆ ಬಗ್ಗೆ ಬಗ್ಗೆ ಕೇಳಲಾದ ಪ್ರಶ್ನೆಗೂ, ಅದಕ್ಕೂ ಕಾಲವೇ ಉತ್ತರಿಸುತ್ತದೆ ಎಂದು ಪ್ರತಿಕ್ರಿಯಿಸಿದರು.

    ಕೇಂದ್ರದ ತೆರಿಗೆ ಪಾಲಿನ ವಿಚಾರವನ್ನು ಕಾಂಗ್ರೆಸ್ ನಾಯಕರು ಚುನಾವಣೆ ದೃಷ್ಟಿಯಿಂದ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ಜನರು ಈಗ ಬಹಳ ಪ್ರಜ್ಞಾವಂತರು, ಬುದ್ಧಿವಂತರಾಗಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.
    ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿರುವುದಕ್ಕೆ ವಿರೋಧ ಸರಿಯಲ್ಲ. ಕುಮಾರಸ್ವಾಮಿ ಅವರಿಗೆ ಸ್ವಲ್ಪ ಆರೋಗ್ಯದ ಸಮಸ್ಯೆ ಇದ್ದು, ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿಲ್ಲ ಎಂದು ಮಾಹಿತಿ ನೀಡಿದರು.

    ಜೆಡಿಎಸ್ ಡಿಜಿಟಲ್ ಯೋಧರ ಸಭೆ:

    ಜೆಡಿಎಸ್ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿರುವ ಉತ್ಸಾಹಿ ಯುವಜನರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಪಾಲ್ಗೊಂಡು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts