More

    ಮ್ಯಾನ್ಯುಯಲ್ ಸ್ಕಾೃವೆಂಜರ್ ವರದಿ ಸಲ್ಲಿಸಲು ಸೂಚನೆ – ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

    ಬೆಳಗಾವಿ: ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗೆ ಸಂಬಂಧಿಸಿದಂತೆ ಸಮೀಕ್ಷೆಯನ್ನು ಪೂರ್ಣಗೊಳಿಸಿ ಹದಿನೈದು ದಿನಗಳಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು. ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸಮೀಕ್ಷೆ ನಡೆದಿದ್ದು, ಮಹಾನಗರ ಪಾಲಿಕೆ ಸೇರಿ ಕೆಲ ಸ್ಥಳೀಯ ಸಂಸ್ಥೆಗಳಲ್ಲಿ ಮರುಪರಿಶೀಲನೆಗೆ ತಿಳಿಸಿದ್ದರಿಂದ ಸಮೀಕ್ಷೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಆದ್ದರಿಂದ 15 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ, ವರದಿ ಸಲ್ಲಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

    ಮ್ಯಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿಯಿಂದ ಹೊರಬಂದವರಿಗೆ ಕೌಶಲ ತರಬೇತಿ ನೀಡುವುದು ಸೇರಿ ಅವರಿಗೆ ಪರ್ಯಾಯ ಉದ್ಯೋಗ ಕಲ್ಪಿಸುವ ಬಗ್ಗೆ ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಕ್ರಮ ಕೈಗೊಳ್ಳಬೇಕು. ಸರ್ಕಾರದ ಸಹಾಯ-ಸೌಲಭ್ಯಗಳನ್ನು ಒದಗಿಸಬೇಕು. ಅದೇ ರೀತಿ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷಾ ಸಲಕರಣೆಗಳನ್ನು ಪೂರೈಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಅದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ, ಪಾಲಿಕೆಯ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಕುರಿತು ವರದಿ ಸಲ್ಲಿಸಲಾಗಿದೆ. ಆದರೆ ಕೆಲವು ಕಡೆಗಳಲ್ಲಿ ಮರು ಪರಿಶೀಲನೆ ನಡೆಸುತ್ತಿರುವುದರಿಂದ ಇದಾದ ಬಳಿಕ ಸಮಗ್ರ ಸಮೀಕ್ಷೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

    ಪಾಲಿಕೆ ಸೇರಿ ಜಿಲ್ಲೆಯ 9 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮರು ಪರಿಶೀಲನೆ ಪ್ರಕ್ರಿಯೆ ನಡೆದಿದೆ. 15 ದಿನಗಳಲ್ಲಿ ಸಮೀಕ್ಷಾ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ್ ಹೊನಕೇರಿ ಸಭೆಗೆ ತಿಳಿಸಿದರು.

    ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಷೇಧಿಸಿದ್ದರೂ ಅಧಿಕಾರಿಗಳ ಕಣ್ತಪ್ಪಿಸಿ ಕೆಲವೆಡೆ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪದ್ಧತಿ ನಡೆಯುತ್ತಿದೆ ಎಂದು ಸಮಿತಿ ಸದಸ್ಯರು ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಈ ಬಗ್ಗೆ ಯಾರಾದರೂ ನಿರ್ದಿಷ್ಟ ಮಾಹಿತಿಯನ್ನು ಒದಗಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಜಿಪಂ ಸಿಇಒ ಎಚ್.ವಿ. ದರ್ಶನ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಸಭೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts