

ಮಾನ್ವಿ: ಪಟ್ಟಣದ ಸರ್ಕಾರಿ ಬಾಷುಮಿಯ ಸಾಹುಕಾರ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಮಾ.15 ರಂದು ರಾಜ್ಯಮಟ್ಟದ ಬೃಹತ್ ಆರೋಗ್ಯ ಮೇಳ ಆಯೋಜನೆ ಮಾಡಿದ್ದು, ಯಶಸ್ಸಿಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಶಾಸಕ ಹಂಪಯ್ಯ ನಾಯಕ ಸೂಚಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನ್ವಿ, ಸಿರವಾರ ತಾಲೂಕು ಹಾಗೂ ಕವಿತಾಳ ಪಟ್ಟಣದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದರು.
ಮೇಳದಲ್ಲಿ ತಜ್ಞ ವೈದ್ಯರು ಆರೋಗ್ಯ ತಪಾಸಣೆ ಮಾಡಲಿದ್ದಾರೆ. ಬರುವ ಸಾರ್ವಜನಿಕರಿಗೆ ಆಹಾರ, ಕುಡಿವ ನೀರು ಸೇರಿ ಮೂಲಸೌಕರ್ಯ, ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. ಗ್ರಾಪಂ ಮಟ್ಟದಲ್ಲಿ ವ್ಯಾಪಕ ಪ್ರಚಾರ ನಡೆಸಬೇಕು ಎಂದು ಸೂಚಿಸಿದರು.
ಟಿಎಚ್‌ಒ ಡಾ.ಶರಣಬಸವರಾಜ ಮಾತನಾಡಿ, ಆರೋಗ್ಯ ಮೇಳದಲ್ಲಿ ಸೂಪರ್ ಸ್ಪೆಷಾಲಿಟಿ ಹೃದಯ ತಜ್ಞರು, ವಿವಿಧ ರೋಗಗಳ ನುರಿತ ತಜ್ಞ ವೈದ್ಯರು ಪಾಲ್ಗೊಂಡು ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿಸಿದರು.