ಆಲೂರು: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮೇಲಿದ್ದು, ನಾವು ಮಕ್ಕಳಿಗೆ ನೀಡುವ ಶಿಕ್ಷಣ ಅವರ ಮುಂದಿನ ಜೀವನ ರೂಪಿಸುವ ಮಾರ್ಗವಾಗಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ ಗೌಡ ತಿಳಿಸಿದರು.
ಕಳೆದ ಸಾಲಿನಲ್ಲಿ ಕನ್ನಡ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ ಸರ್ಕಾರಿ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ವತಿಯಿಂದ ತಾಲೂಕಿನ ಹೊನ್ನೇನಹಳ್ಳಿ ಕೂಡಿಗೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ದತ್ತಿ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಶಿಕ್ಷಣದೊಂದಿಗೆ ದೈಹಿಕ ಚಟುವಟಿಕೆಗಳಿಗೂ ಆದ್ಯತೆ ನೀಡುವಂತಾಗಬೇಕು. ಮಕ್ಕಳ ಆಸಕ್ತಿ ಹಾಗೂ ಪ್ರತಿಭೆಗೆ ತಕ್ಕಂತೆ ವೇದಿಕೆ ನೀಡಿದರೆ ಸಮಾಜದ ಆಸ್ತಿಯಾಗಿ ಬೆಳೆಯುತ್ತಾರೆ. ಪ್ರಸ್ತುತ ಪಾಲಕರು ಕೆಲಸದ ಒತ್ತಡದಿಂದ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಚರ್ಚಿಸುವ ಪರಂಪರೆ ಮರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ದೊರೆಯುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತಾಗಬೇಕು ಎಂದರು.
ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಸಾಪ ಮಾಜಿ ಜಿಲ್ಲಾಧ್ಯಕ್ಷ ಎಚ್.ಬಿ .ಮದನಗೌಡ, ರಾಜ್ಯ ಸಣ್ಣ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಘದ ರಾಜ್ಯಾಧ್ಯಕ್ಷ ಜಿ.ಆರ್. ಕೆಂಚೇಗೌಡ, ಹಾಸನ ಡಯಟ್ ಉಪನ್ಯಾಸಕಿ ಪ್ರೇಮಾ, ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಚಿದಾನಂದ, ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಇತರರಿದ್ದರು.