More

    ಕಾಡು ಪ್ರಾಣಿಗಳ ಹಾವಳಿ ತಡೆಗೆ ಕ್ರಮ

    ಹನಗೋಡು: ಕಾಡು ಪ್ರಾಣಿಗಳ ಹಾವಳಿ ತಡೆಯಲು ಅರಣ್ಯದಂಚಿನಲ್ಲಿ ತಡೆಗೋಡೆ ಮತ್ತು ಹೊಂಡಗಳನ್ನು ನಿರ್ಮಿಸಲಾಗುವುದೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

    ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ಸಮೀಪದ ಖಾಸಗಿ ರೆಸಾರ್ಟ್‌ಗೆ ಕುಟುಂಬ ಸಮೇತ ವಿಶ್ರಾಂತಿಗಾಗಿ ಆಗಮಿಸಿ, ಸೋಮವಾರ ಅರಣ್ಯದೊಳಗೆ ಸಫಾರಿ ಮಾಡಿ, ನಂತರ ಸ್ಥಳೀಯರ ಮನವಿ ಸ್ವೀಕರಿಸಿ ಮಾತನಾಡಿದರು.

    ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಬೆಳೆ ಹಾನಿಯಾಗಿದ್ದು, ಕೃಷಿಕರಿಗೆ ಸಮಸ್ಯೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾಡು ಪ್ರಾಣಿಗಳು ತೋಟಗಳಿಗೆ ನುಗ್ಗದಂತೆ ಅರಣ್ಯ ಪ್ರದೇಶದಂಚಿನಲ್ಲಿ ತಡೆಗೋಡೆ ಹಾಗೂ ಹೊಂಡಗಳನ್ನು ನಿರ್ಮಿಸಲಾಗುವುದು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನವು ಪ್ರವಾಸಿ ತಾಣವಾಗಿರುವುದರಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಅರಣ್ಯ ಆಸುಪಾಸಿನಲ್ಲಿ ಸ್ವಚ್ಛತೆ ಕಾಪಾಡುವುದು ಮುಖ್ಯ. ಸಫಾರಿ ಕೇಂದ್ರಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿ ಇಡುವಂತೆ ಮತ್ತು ಕಸದ ತೊಟ್ಟಿಗಳನ್ನು ನಿರ್ಮಾಣ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಪ್ರವಾಸಿ ತಾಣಗಳಲ್ಲಿ ರಸ್ತೆಗಳ ಅಭಿವೃದ್ಧಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.

    ಎಪಿಎಂಸಿ ಮಾಜಿ ಅಧ್ಯಕ್ಷ ಮುದಗನೂರು ಸುಭಾಷ್, ದೊಡ್ಡಹೆಜ್ಜೂರು ಗ್ರಾಪಂ ಮಾಜಿ ಅಧ್ಯಕ್ಷ ದಾ.ರಾ.ಮಹೇಶ್, ಉದ್ಯಮಿ ರವಿಚಂದ್ರನ್ ಅವರು ಸಚಿವರಿಗೆ ಮನವಿಪತ್ರ ನೀಡಿ, ಈ ಭಾಗದಲ್ಲಿ ಕಾಡು ಪ್ರಾಣಿಗಳಿಂದ ಬೆಳೆ ಹಾಗೂ ಜೀವ ಹಾನಿಯಾಗುತ್ತಿದೆ. ಆದ್ದರಿಂದ ಹೆಚ್ಚಿನ ಮೊತ್ತದ ಪರಿಹಾರ ನೀಡುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಡಾ.ಹರ್ಷಕುಮಾರ್ ಚಿಕ್ಕನರಗುಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿನಯ್, ವಲಯ ಅರಣ್ಯಧಿಕಾರಿ ಅಭಿಷೇಕ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts