More

    ಪ್ರತಿದಿನ 1.5 ಕಿಮೀ ಹೆದ್ದಾರಿ ಅಭಿವೃದ್ಧಿ

    ಶಿವಮೊಗ್ಗ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೂ ಮುನ್ನ ಪ್ರತಿದಿನ ರಾಷ್ಟ್ರೀಯ ಹೆದ್ದಾರಿಗಳು ಕೇವಲ 0.6 ಕಿಮೀ ಮಾತ್ರ ಅಭಿವೃದ್ಧಿ ಆಗುತ್ತಿತ್ತು. ಆದರೆ ಪ್ರಸ್ತುತ ಪ್ರತಿದಿನ 1.5 ಕಿಮೀಗೆ ಏರಿಕೆ ಆಗುತ್ತಿದ್ದು ದೇಶದಲ್ಲಿ ಹೆದ್ದಾರಿಗಳು ಒಳಗೊಂಡಂತೆ ಗ್ರಾಮೀಣ ಭಾಗದ ರಸ್ತೆಗಳೂ ಅಭಿವೃದ್ಧಿ ವೇಗ ಪಡೆದುಕೊಂಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಫವೇಂದ್ರ ಹೇಳಿದರು.

    ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಶನಿವಾರ ಕೇಂದ್ರ ಭೂ ಸಾರಿಗೆ ಮಂತ್ರಾಲಯ ಹಾಗೂ ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಜಿಲ್ಲೆಯ 5 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಒಂದು ಕಾಮಗಾರಿಯ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ರಾಜ್ಯದಲ್ಲಿ ಇದುವರೆಗೆ 22 ಇದ್ದ ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆಯನ್ನು 44ಕ್ಕೆ ಹೆಚ್ಚಿಸಲಾಗಿದೆ. 5,781 ಕೋಟಿ ರೂ. ವೆಚ್ಚದಲ್ಲಿ 588 ಕಿಮೀ ಉದ್ದದ ರಾಜ್ಯದ 27 ಎನ್​ಎಚ್​ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಅಲ್ಲದೆ 5,499 ಕೋಟಿ ರೂ. ವೆಚ್ಚದ 644 ಕಿಮೀ ವ್ಯಾಪ್ತಿಯ 8 ಎನ್​ಎಚ್​ಗಳನ್ನು ಲೋಕಾರ್ಪಣೆಗೊಳಿಸಲಾಗಿದೆ. ಇದು ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದ ಯೋಜನೆಗಳನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ ಎಂದರು.

    423 ಕೋಟಿ ರೂ. ವೆಚ್ಚದಲ್ಲಿ ಕಳಸವಳ್ಳಿ-ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದ್ದು ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ. 516 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ಅಭಿವೃದ್ಧಿಯಿಂದ ಬೆಂಗಳೂರು ಸಂಪರ್ಕ ಸುಲಭವಾಗಲಿದೆ. ರಸ್ತೆ, ಸೇತುವೆ, ವಿಮಾನ ನಿಲ್ದಾಣ, ನೀರಾವರಿ ಸೇರಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಮುಂದಿನ ಎರಡೂವರೆ ವರ್ಷದಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಶಾಸಕ ಆರಗ ಜ್ಞಾನೇಂದ್ರ, ಎಂಎಲ್​ಸಿಗಳಾದ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಕಾಪೋರೇಟರ್​ಗಳಾದ ಎಸ್.ಎನ್.ಚನ್ನಬಸಪ್ಪ, ಎಸ್.ಜ್ಞಾನೇಶ್ವರ್, ರಾಹುಲ್ ಬಿದರೆ, ಸುನೀತಾ ಅಣ್ಣಪ್ಪ, ಅನಿತಾ ರವಿಶಂಕರ್, ಪ್ರಭಾಕರ್, ಎಸ್ಪಿ ಕೆ.ಎಂ.ಶಾಂತರಾಜು, ಎಡಿಸಿ ಜಿ.ಅನುರಾಧಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts