#MeToo: ಪಿಐಎಲ್​ನ ತುರ್ತು ವಿಚಾರಣೆ ಇಲ್ಲವೆಂದ ಸುಪ್ರೀಂ ಕೋರ್ಟ್

ನವದೆಹಲಿ: ಮೀ ಟೂ ಅಭಿಯಾನದಲ್ಲಿ ಪ್ರಸ್ತಾಪಿತವಾಗಿರುವ ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​, ಜಸ್ಟೀಸ್​ ಎಸ್​.ಕೆ. ಕೌಲ್​ ಅವರಿದ್ದ ಪೀಠ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತುರ್ತು ವಿಚಾರಣೆ ಅಗತ್ಯವಿಲ್ಲ, ಸಾಮಾನ್ಯ ಪ್ರಕ್ರಿಯೆಯಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ ಎಂದು ತಿಳಿಸಿತು.

ಮೀ ಟೂ ಅಭಿಯಾನದಲ್ಲಿ ತಮ್ಮ ಮೇಲಾಗಿರುವ ಲೈಂಗಿಕ ಕಿರುಕುಳವನ್ನು ಮಹಿಳೆಯರು ಹೇಳಿಕೊಂಡಿದ್ದಾರೆ. ಅವರು ಆರೋಪಿಸಿರುವವರ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್​ ವಕೀಲ ಎಂ.ಎಲ್​. ಶರ್ಮಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಶರ್ಮಾ ತಮ್ಮ ಅರ್ಜಿಯಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ವಿಚಾರಣೆಗಾಗಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. (ಏಜೆನ್ಸೀಸ್​)