ಬೆಂಗಳೂರು: ಮೈಕ್ರೊ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಾಲ ವಸೂಲಾತಿಗೆ ರೌಡಿಶೀಟರ್ಗಳು, ಗೂಂಡಾಗಳನ್ನು ಬಳಸಲೇಬಾರದು. ಸಾಲ ವಸೂಲಾತಿ ಜವಾಬ್ದಾರಿಯನ್ನು ಫೈನಾನ್ಸ್ಗಳು ಔಟ್ಸೋರ್ಸ್ ಕೊಡಬಾರದು. ಹಾಗೆ ಮಾಡಿದ್ದೇ ಆದರೆ ಅಂಥವರ ವಿರುದ್ಧ ಕೇಸು ದಾಖಲಿಸಿ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆಂದು ಸಿಎಂ ಸಿದ್ದರಾಮಯ್ಯ ಶನಿವಾರ(ಜನವರಿ 25) ಸೂಚಿಸಿದ್ದಾರೆ.
ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ಸಿಎಂ ಪ್ರಶ್ನಿಸಿದರು. ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ. ಮತ್ತು ಸಾಲಗಾರರಿಗೆ ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೆ ಸಾಲ ಕೊಡುತ್ತಿರುವುದು ಏಕೆ? ಎಂದು ತರಾಟೆ ತೆಗೆದುಕೊಂಡರು.
ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೆ ಸಾಲ ಕೊಡುವುದು ತಪ್ಪುತ್ತಿತ್ತು ಎಂದು ಸಿದ್ದರಾಮಯ್ಯ ಸೂಚನೆಗಳನ್ನು ನೀಡಿದರು. ಅಲ್ಲದೆ ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಸುದ್ದಿಗಳು ದಿನನಿತ್ಯ ವರದಿಯಾಗುತ್ತಿವೆ. ಇದನ್ನೆಲ್ಲಾ ನಮ್ಮ ಸರ್ಕಾರ ಸಹಿಸುವುದಿಲ್ಲ. ಜನರ ರಕ್ಷಣೆಗೆ ಕಠಿಣ ಕ್ರಮಕೈಗೊಳ್ಳಲು ಸಭೆಯಲ್ಲಿ ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸೇರಿದಂತೆ ಆರ್ಬಿಐನ ಉನ್ನತ ಅಧಿಕಾರಿಗಳು ಇತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.