

ಬೆಂಗಳೂರು: ಕೆಲವು ದಿನಗಳ ಹಿಂದೆ ಇಂಧನ ದರ ಏರಿಕೆ ಮಾಡಿ ಜನತೆಗೆ ಶಾಕ್ ನೀಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಜನರಿಗೆ ಮತ್ತೊಮ್ಮೆ ಬರೆ ಎಳೆದಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಹಾಲಿನ ದರ ಹೆಚ್ಚಿಸಿದೆ . ಪ್ರತಿ ಲೀಟರ್ ಹಾಲಿನ ದರ 2.10 ರೂ. ಹೆಚ್ಚಿಸಿ ಆದೇಶ ಹೊರಡಿಸಿದೆ. ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಹಾಲಿನ ದರ ಹೆಚ್ಚಳಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ. ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ ಮಾಡ್ತಾರೆ. ನನಗೆ ಗೊತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಇಲ್ಲಿ ಕಡಿಮೆ ಇದೆ ಎಂದು ಹೇಳಿದ್ದಾರೆ.
ಸರ್ಕಾರ ಕೆಲವು ದಿನಗಳ ಹಿಂದೆ ಇಂಧನ ದರ ಏರಿಕೆ ಮಾಡಿತ್ತು. ಈ ಬೆನ್ನಲ್ಲೇ ಈಗ ಹಾಲಿನ ದರವನ್ನೂ ಹೆಚ್ಚಳ ಮಾಡಲಾಗಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಕೆ ಮಾಡಲು ಬೆಲೆ ಏರಿಕೆ ಮಾಡಲಾಗುತ್ತಿದೆ. ಇನ್ನು ಯಾವಯಾವ ವಸ್ತುಗಳ ಬೆಲೆ ಏರಿಕೆ ಆಗುತ್ತದೆ ಎಂದು ಜನಸಾಮಾನ್ಯರು ಆತಂಕ ವ್ಯಕ್ತಪಡಿಸಿದ್ದಾರೆ.