More

    ಎಚ್‌ಡಿಕೆ ಘೋಷಿಸಿದ ಎಂಟು ಸಾವಿರ ಕೋಟಿ ರೂ ಅನುದಾನಕ್ಕೆ ಹುಡುಕಾಟ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯ

    ಮಂಡ್ಯ: ಹಿಂದೆ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವಧಿಯಲ್ಲಿ 8 ಸಾವಿರ ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದ್ದರು. ಆ ಹಣಕ್ಕಾಗಿ ಹುಡುಕಾಟ ನಡೆಸುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯವಾಡಿದರು.
    ನಗರದ ಸುಮ ರವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಲೋಕಸಭಾ ಚುನಾವಣೆ ಸಂಬಂಧ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 8 ಸಾವಿರ ಕೋಟಿ ರೂಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ಕರೆದು ಎಲ್ಲ ಕಡತಗಳನ್ನೂ ಹುಡುಕಿಸಿದ್ದೇನೆ. ಆದರೆ ಒಂದೇ ಒಂದು ರೂ ಸಿಕ್ಕಿಲ್ಲ. ಯಾವ ಕಾಗದದಲ್ಲಾದರೂ ಹಣ ಇರುವ ಬಗ್ಗೆ ಮಾಹಿತಿ ನೀಡಿದಲ್ಲಿ ಹುಡುಕಿಸಿ ಅದನ್ನು ಅಭಿವೃದ್ಧಿಗೆ ಬಳಸಿಕೊಳ್ಳುತ್ತೇವೆ ಎಂದು ತಿರುಗೇಟು ನೀಡಿದರು.
    ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ ನಗರದಲ್ಲಿ ಹಾದುಹೋಗುವ ಮೈಸೂರು-ಬೆಂಗಳೂರು ಹೆದ್ದಾರಿ ಅಭಿವೃದ್ಧಿಗಾಗಿ 110 ಕೋಟಿ ರೂ ಅನುದಾನವನ್ನು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ತಂದಿದ್ದೇವೆ. ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ. ಜಿಲ್ಲೆಯ ಎಲ್ಲ ರಸ್ತೆಗಳ ಅಭಿವೃದ್ಧಿಗಾಗಿ 250 ರಿಂದ 300 ಕೋಟಿ ರೂ ಅನುದಾನ ಬಿಡುಗಡೆಯಾಗಲಿದೆ. ಶ್ರೀರಂಗಪಟ್ಟಣ-ಪಾಂಡವಪುರ ಸೇರಿದಂತೆ ಮೂರ‌್ನಾಲ್ಕು ಬೈಪಾಸ್ ರಸ್ತೆಗಳ ನಿರ್ಮಾಣ ಆಗಲಿದೆ. ಇದರೊಂದಿಗೆ ಇಡೀ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತೇವೆ ಎಂದ ಅವರು, ಕಾಂಗ್ರೆಸ್ ಪಕ್ಷ ನೀಡಿದ್ದ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದೆ. ಸಣ್ಣ ಪುಟ್ಟ ಸಮಸ್ಯೆಗಳಿಂದಾಗಿ ಫಲಾನುಭವಿಗಳಿಗೆ ಸಿಕ್ಕಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳ ಸಭೆ ನಡೆಸಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಎಲ್ಲ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆ ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ವಿವರಿಸಿದರು.
    ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಮಧು ಜಿ.ಮಾದೇಗೌಡ, ದಿನೇಶ್‌ಗೂಳಿಗೌಡ, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ, ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts