More

    ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಿ – ಜೊಲ್ಲೆ ಮನವಿ

    ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರಿಗೆ ಮತ ನೀಡುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮನವಿ ಮಾಡಿದರು.

    ಬೆಳಗಾವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತುರಮುರಿ, ಉಚಗಾಂವ, ಬೆಕ್ಕಿನಕೆರೆ ಗ್ರಾಮಗಳಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರ ಮತಯಾಚನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ದಿ. ಸುರೇಶ ಅಂಗಡಿ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅಲ್ಲದೆ, ರೈಲ್ವೆ ಸಚಿವರಾದ ಬಳಿಕ ಹೊಸ ಯೋಜನೆಗಳನ್ನು ಜಾರಿಗೊಳಿಸಿ ಬೆಳಗಾವಿ ಲೋಕಸಭಾ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದರು. ಆದರೆ, ಅವರ ಅಕಾಲಿಕ ನಿಧನದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ಉಳಿದುಕೊಂಡಿವೆ. ಅವುಗಳನ್ನು ಮುಂದುವರಿಸಿಕೊಂಡು ಹೋಗಲು ಮಂಗಲ ಅಂಗಡಿ ಅವರಿಗೆ ಮತ ಚಲಾಯಿಸುವ ಮೂಲಕ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

    ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುಭದ್ರ ಆಡಳಿತ ನೀಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿನ ಬಡವರಿಗೆ, ರೈತರಿಗೆ, ಮಹಿಳೆಯರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಲ್ಲದೆ, ಸಾವಿರಾರು ಮಹಿಳೆಯರು ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಂಡು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿ ಹಿತದೃಷ್ಟಿಯಿಂದ ಬಿಜೆಪಿಗೆ ಮತ ಹಾಕಬೇಕು ಎಂದು ವಿನಂತಿಸಿದರು.

    ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಲ್ಲಿನ ರಸ್ತೆ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಕೋವಿಡ್-19 ಮತ್ತು ಅತಿವೃಷ್ಟಿ ಸಂದರ್ಭದಲ್ಲಿ ರೈತರಿಗೆ, ಕೂಲಿ ಕಾರ್ಮಿಕರಿಗೆ, ನೇಕಾರರಿಗೆ ಆರ್ಥಿಕ ಸಹಾಯಧನದ ಜತೆಗೆ ಸಬ್ಸಿಡಿ ಯೋಜನೆಗಳನ್ನು ಘೋಷಣೆ ಮಾಡಿದೆ. ಪ್ರತಿ ಪಕ್ಷ ಕಾಂಗ್ರೆಸ್‌ಗೆ ಮತ ಹಾಕಿದರೆ ಏನೂ ಪ್ರಯೋಜನ ಇಲ್ಲ ಎಂದು ಹೇಳಿದರು.

    ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಹೊಂದುತ್ತಿರುವ ಬೆಳಗಾವಿ ನಗರಕ್ಕೆ ದಿ.ಸುರೇಶ ಅಂಗಡಿಯವರ ಕೊಡುಗೆ ಅಪಾರ. ಇದನ್ನು ಮುಂದುವರಿಸಲು ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ ಅಂಗಡಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂದರು.

    ಪ್ರಧಾನಮಂತ್ರಿ ಮೋದಿಯವರ ಕಾರ್ಯವನ್ನು ಇಡೀ ವಿಶ್ವವೇ ಮೆಚ್ಚಿದ್ದು, ಜನಧನ್ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ, ಹೀಗೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಿ ಕಾಮಗಾರಿಗಳನ್ನು ಕೈಗೊಳ್ಳುವುದರೊಂದಿಗೆ ಭಾರತ ದೇಶದಲ್ಲಿ ಧರ್ಮ ರಕ್ಷಣೆ, ಭಾರತೀಯ ಸಂಸ್ಕೃತಿ ಜೀವಂತವಾಗಿರಿಸಲು ಶ್ರಮಿಸುತ್ತಿದ್ದಾರೆ. ಇಂತಹ ಮಹಾನ್ ನಿಸ್ವಾರ್ಥ ವ್ಯಕ್ತಿಯ ಕೈ ಬಲಪಡಿಸಲು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಹೇಳಿದರು.

    ಬಿಜೆಪಿ ಮಂಡಲ ಅಧ್ಯಕ್ಷ ಧನಂಜಯ ಜಾಧವ, ಚೇತನ ಅಂಗಡಿ, ಮನೋಹರ ಕಡೊಲ್ಕರ್, ಶಿವಾಜಿ ಸುಣಕರ, ವಿನಯ ಕದಂ, ಭಾಗ್ಯಶ್ರೀ ಕೋಕಿತಕರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts