

ವಿಜಯವಾಣಿ ಸುದ್ದಿಜಾಲ ಉಡುಪಿ
ಕಳೆದ ವರ್ಷದಂತೆ ಈ ವರ್ಷವೂ ಸಹ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಟಾಸ್ಕ್ ಫೋರ್ಸ್ ರಚಿಸಿ ಸನ್ನದ್ಧರಾಗಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಡಳಿತಕ್ಕೆ ಸೂಚಿಸಿದರು.
ನಗರದಲ್ಲಿ ಸಣ್ಣ ಮಳೆಯಾದರೂ ಸಮಸ್ಯೆಯಾಗುತ್ತಿದ್ದು, ಎಲ್ಲ ಇಲಾಖೆಗಳು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು. ಅರಣ್ಯ ಇಲಾಖೆಯವರು ಅಪಾಯಕಾರಿ ಗಿಡ-ಮರಗಳಿದ್ದಲ್ಲಿ ತೆರವುಗೊಳಿಸಬೇಕು. ಮೆಸ್ಕಾಂನವರು ವಿದ್ಯುತ್ ಕಂಬ ಹಾಗೂ ತಂತಿಗಳ ಬದಲಿಸುವಿಕೆ ಇದ್ದರೆ ಮಳೆಗಾಲದ ಮೊದಲೇ ಮಾಡಬೇಕು. ಅಗತ್ಯ ಇರುವೆಡೆ ಕಾಲುಸಂಕ ನಿರ್ಮಾಣಕ್ಕೆ ಮುಂದಾಗಬೇಕು. ಮಳೆಗಾಲ ನಿರ್ವಹಣೆಗೆ ಸಂಬಂಧಿಸಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠ ಡಾ. ಕೆ.ಅರುಣ, ಜಿಪಂ ಸಿಇಒ ಪ್ರತೀಕ ಬಾಯಲ್, ಜಿಲ್ಲಾ ಅರಣ್ಯಾಧಿಕಾರಿ ಗಣಪತಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.