ಸಚಿವ ಜಮೀರ್‌ರನ್ನು ಸಂಪುಟದಿಂದ ಕೈ ಬಿಡಲು ಹೈಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಜಾಕ್ ಉಸ್ತಾದ್ ಒತ್ತಾಯ

ರಾಯಚೂರು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಬರಬೇಕಾದ ವಿದ್ಯಾರ್ಥಿ ವೇತನ ನೀಡುವಲ್ಲಿ ವಿಫಲವಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಹೈಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಜಾಕ್ ಉಸ್ತಾದ್ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಅಲ್ಪಸಂಖ್ಯಾತರಾದ ಮುಸ್ಲಿಂ, ಸಿಖ್, ಪಾರ್ಸಿ, ಬೌದ್ಧ ಹಾಗೂ ಕ್ರಿಶ್ಚಿಯನ್ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸ್ವೀಕರಿಸಲಾಗಿದೆ. ರಾಜ್ಯದ 4.5 ಲಕ್ಷ ವಿದ್ಯಾರ್ಥಿಗಳಿಗೆ ಕೇಂದ್ರ ವಿದ್ಯಾರ್ಥಿ ವೇತನ ನೀಡಿದೆ. ಇನ್ನುಳಿದ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ ನೀಡಬೇಕಾಗಿದೆ ಎಂದರು. ಜೂನ್ ಮುಗಿಯುತ್ತಾ ಬಂದರೂ ಈವರೆಗೆ ಪಾವತಿಯಾಗಿಲ್ಲ. ಸುಮಾರು 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವಿಲ್ಲದೇ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕಾಳಜಿ ವಹಿಸಿ ಸಚಿವ ಜಮೀರ್ ಅಧಿಕಾರಿಗಳ ಜತೆ ಚರ್ಚಿಸಿ ವಿದ್ಯಾರ್ಥಿ ವೇತನ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು.

ಮುಂದಿನ ವರ್ಷಕ್ಕೆ ಪ್ರವೇಶ ಪಡೆಯುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಂತದಲ್ಲಿ ವಿದ್ಯಾರ್ಥಿ ವೇತನ ನೀಡದಿದ್ದರೆ ಅಲ್ಪಸಂಖ್ಯಾತರು ಶಿಕ್ಷಣದಿಂದ ವಂಚಿತವಾಗಲಿದ್ದಾರೆ. ಅದರಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರ ಪಾತ್ರ ಮಹತ್ವದಾಗಿದ್ದರೂ, ಕೈ ಕಟ್ಟಿ ಕುಳಿತು ಅನ್ಯಾಯ ಮಾಡುತ್ತಿರುವುದನ್ನು ಸಹಿಸಲಾಗದು. ಕೂಡಲೇ ಅವರನ್ನು ಸಿಎಂ ಕುಮಾರಸ್ವಾಮಿ ತಮ್ಮ ಸಚಿವ ಸಂಪುಟದಿಂದ ಕೈಬಿಟ್ಟು ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯ ತಪ್ಪಿಸಲು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಿರಾಜ್ ಜಾಫ್ರಿ, ಸೈಯದ್ ಶಂಶುದ್ದೀನ್, ಮೊಹಮದ್ ರಫಿ ಇತರರಿದ್ದರು.

Leave a Reply

Your email address will not be published. Required fields are marked *