ದಲಿತದ್ರೋಹಿ ರಾಜ್ಯಸರ್ಕಾರದಿಂದ ಹಣ ದುರ್ಬಳಕೆ

sabhe
Published on

ಕುಂದಾಪುರ: ಕಾಂಗ್ರೆಸ್ ನೇತೃತ್ವದ ದಲಿತ ದ್ರೋಹಿ ರಾಜ್ಯ ಸರ್ಕಾರ ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ 25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿದೆ. ಇದನ್ನು ವಿರೋಧಿಸಿ ಫೆ.28ರಂದು ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಕುಂದಾಪುರ ಬಿಜೆಪಿ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಹೇಳಿದರು.

ಕುಂದಾಪುರ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕುಂದಾಪುರ ಮಂಡಲದ ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿ, ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಬಳಿ ನಡೆಯುವ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಕೆ ಸಂದರ್ಭ ರಾಜ್ಯ ಬಿಜೆಪಿ ಪ್ರಮುಖರಾದ ಸಂಸದ ರಮೇಶ ಜಿಗಜಿಣಗಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಕುಂದಾಪುರ ಮಂಡಲದ ಕಾರ್ಯಕ್ರಮ ಸಂಚಾಲಕ ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರ್ ಮಾತನಾಡಿದರು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಕಡ್ಗಿಮನೆ, ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಪುರಸಭಾ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್.ಸ್ವಾಗತಿಸಿದರು, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net